Kodagu

ಮೂರ್ನಾಡು ಹೋಬಳಿ ಘಟಕದ 3ನೇ ವರ್ಷದ 71 ನೇ ಕನ್ನಡ ರಾಜ್ಯೋತ್ಸವ ಕನ್ನಡ ಹಬ್ಬ ; ಕನ್ನಡ ಭಾಷೆ ನಾಡಿನ ಎಲ್ಲರ ಅಸ್ಮಿತೆ; ಶಾಸಕದ್ವಯರ ಅಭಿಮತ

admincoorgdaily

ಮೂರ್ನಾಡು ಹೋಬಳಿ ಘಟಕದ 3ನೇ ವರ್ಷದ 71 ನೇ ಕನ್ನಡ ರಾಜ್ಯೋತ್ಸವ ಕನ್ನಡ ಹಬ್ಬ ; ಕನ್ನಡ ಭಾಷೆ ನಾಡಿನ ಎಲ್ಲರ ಅಸ್ಮಿತೆ; ಶಾಸಕದ್ವಯರ ಅಭಿಮತ
1002860922.jpg


1002861222.jpg


ಮಡಿಕೇರಿ:-ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಿರಂತರವಾಗಿ ನಡೆಯಬೇಕು. ಕನ್ನಡ ಭಾಷೆಯ ರಕ್ಷಣೆಗೆ ಎಷ್ಟು ಆದ್ಯತೆ ನೀಡುತ್ತೇವೆಯೋ, ಅದೇ ರೀತಿ ಇತರ ಕನ್ನಡ ಉಪ ಭಾಷೆಗಳ ಬೆಳವಣಿಗೆಗೂ ಪ್ರೋತ್ಸಾಹ ನೀಡಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಹೇಳಿದರು. 

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕ.ಸಾ.ಪ, ಮೂರ್ನಾಡು ಹೋಬಳಿ ಘಟಕ, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮರಗೋಡು ಹಾಗೂ ಮೂರ್ನಾಡು ಹೋಬಳಿ ಘಟಕದ ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ಸಹಯೋಗದಲ್ಲಿ ಶನಿವಾರ ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರ್ನಾಡು ಹೋಬಳಿ ಘಟಕದ 3ನೇ ವರ್ಷದ 71ನೇ ಕನ್ನಡ ರಾಜ್ಯೋತ್ಸವ "ಕನ್ನಡ ಹಬ್ಬ"ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಮಾತನಾಡಲು ಹಾಗೂ ಭಾಷೆಯನ್ನು ಉಳಿಸಲು ದೊರೆಯುವ ಯಾವುದೇ ಅವಕಾಶವನ್ನು ಕೈಬಿಡಬಾರದು. ನಮ್ಮವರು ದೇಶದ ಯಾವುದೇ ಭಾಗಕ್ಕೆ ಅಥವಾ ವಿದೇಶಕ್ಕೆ ತೆರಳಿದರೂ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು. ಕನ್ನಡಾಭಿಮಾನ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೆ, ವರ್ಷದ ಪ್ರತಿದಿನವೂ ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ನಿರಂತರವಾಗಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಾಹಿತ್ಯದ ಪರಿಚಯ ಮಾಡಿಕೊಡಬೇಕು ಎಂದು ಹೇಳಿದರು.

ಎಲ್ಲರೂ ಒಗ್ಗಟ್ಟಿನಿಂದ ಬಾಳಲು ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ದಸರಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರಿಂದ ಜನರನ್ನು ಒಗ್ಗೂಡಿಸಲು ಸಾಧ್ಯವಾಗುತ್ತದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕವಾಗಿವೆ ಎಂದರು.

ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು. ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡ ಭಾಷೆಯ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು.   

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಕನ್ನಡ ಎಲ್ಲರ ಹೃದಯದ ಭಾಷೆಯಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.

ವಿಶ್ವದಲ್ಲಿ ಅನೇಕ ಭಾಷೆಗಳು ಕಣ್ಮರೆಯಾಗಿವೆ. ಅದೇ ರೀತಿ ಕನ್ನಡ ಭಾಷೆಯೂ ಆತಂಕವನ್ನು ಎದುರಿಸುತ್ತಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದರೆ ಸಾಹಿತಿಗಳು ಹಾಗೂ ಸಾಹಿತ್ಯದ ಬೆಳವಣಿಗೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಭಾಷೆಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವುದು ಸ್ವಾಗತಾರ್ಹ ಎಂದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ರಕ್ಷಣೆಯ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಒಂದೇ ಧ್ವನಿಯಲ್ಲಿ ಕಾರ್ಯನಿರ್ವಹಿಸಬೇಕು. ಕನ್ನಡ ಸಾಹಿತಿಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ. ಕನ್ನಡ ಪುಸ್ತಕಗಳನ್ನು ಓದಿ, ಅವುಗಳ ಕುರಿತು ತಮ್ಮ ಅಭಿಪ್ರಾಯ ಹಾಗೂ ಭಾಷೆಯ ಮೇಲಿನ ಅಭಿಮಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುವ ಮೂಲಕ ಕನ್ನಡದ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕರೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ರಕ್ಷಣೆಗೆ ಅಪಾರ ಕೊಡುಗೆ ನೀಡುತ್ತಿದ್ದು, ಕನ್ನಡದ ಭಾಷೆ ಪರಂಪರೆ ಹಾಗೂ ಸಾಹಿತ್ಯಿಕ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ನಮ್ಮ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕನ್ನಡವನ್ನು ಕೇವಲ ಕನ್ನಡ ರಾಜ್ಯೋತ್ಸವದ ದಿನಕ್ಕೆ ಸೀಮಿತಗೊಳಿಸದೆ, ದೈನಂದಿನ ಬದುಕಿನಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳಿಗೂ ಮೀರಿದ ಇತಿಹಾಸವಿದ್ದು, ಹಲ್ಮಿಡಿ ಶಾಸನವು ಕನ್ನಡದ ಪ್ರಾಚೀನತೆಗೆ ಸಾಕ್ಷಿಯಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿರುವುದು ಹೆಮ್ಮೆಯ ಸಂಗತಿ. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಕನ್ನಡ ಸಾಹಿತ್ಯದ ಶ್ರೀಮಂತಿಕೆ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಕವಿರಾಜಮಾರ್ಗದಿಂದ ಆರಂಭಗೊಂಡು ಪಂಪ ಸೇರಿದಂತೆ ಅನೇಕ ಮಹಾನ್ ಸಾಹಿತಿಗಳ ಕೊಡುಗೆ ಕನ್ನಡ ಸಾಹಿತ್ಯದ ವೈಭವವನ್ನು ಹೆಚ್ಚಿಸಿದೆ. ಇಂತಹ ಸಾಹಿತ್ಯ ಕೃತಿಗಳ ಕುರಿತು ನಿರಂತರ ಅಧ್ಯಯನ ಮತ್ತು ಸಂಶೋಧನೆಗಳು ನಡೆಯಬೇಕು ಎಂದು ಅವರು ತಿಳಿಸಿದ್ದಾರೆ. 

ಕೊಡಗು ಜಿಲ್ಲೆಯಲ್ಲಿ ಕನ್ನಡ ಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಹಲವು ಸಂಘ-ಸಂಸ್ಥೆಗಳು ಮಹತ್ವದ ಕೊಡುಗೆ ನೀಡಿವೆ. 1938 ರಿಂದ ಕೊಡಗು ಕನ್ನಡ ಸಾಹಿತ್ಯ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಕನ್ನಡದ ಬೆಳವಣಿಗೆಗೆ ಶ್ರಮಿಸಿವೆ. ನಂತರ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವಕ್ಕೆ ಬಂದು ಜಿಲ್ಲೆಯಾದ್ಯಂತ ಕನ್ನಡಪರ ಚಟುವಟಿಕೆಗಳಿಗೆ ವೇದಿಕೆಯಾಯಿತು ಎಂದರು. 

ಪ್ರಸ್ತುತ ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಕನ್ನಡ ಸಾಹಿತ್ಯ ಸಮ್ಮೇಳನ, ವಿಚಾರಗೋಷ್ಠಿ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗಡಿ ಜಿಲ್ಲೆಯಾದ ಕೊಡಗಿನಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಈ ಸಂಘ-ಸಂಸ್ಥೆಗಳ ಕೊಡುಗೆ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರು, ಮಕ್ಕಳಲ್ಲಿ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಬೆಳೆಸುವುದರ ಜೊತೆಗೆ ಮಾತೃಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ವಿದ್ಯಾರ್ಥಿಗಳು ಅತಿಯಾದ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. 

ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕ ಅವರೆಮಾದಂಡ ಶರತ್ ಪೂಣಚ್ಚ ಅವರು ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಪ್ರತಿಯೊಂದು ಮನೆಯಿಂದಲೇ ಆರಂಭವಾಗಬೇಕು. ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ದೈನಂದಿನ ವ್ಯವಹಾರದಲ್ಲೂ ಕನ್ನಡಕ್ಕೆ ಆದ್ಯತೆ ನೀಡಿದಾಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇಂದಿನ ಜಾಗತಿಕ ರಾಜಕೀಯ ಹಾಗೂ ಯುದ್ಧದ ಆತಂಕದ ಪರಿಸ್ಥಿತಿಯಲ್ಲಿ ಇಂಧನ ಸ್ವಾವಲಂಬನೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಂದು ಗ್ರಾಮ ಹಾಗೂ ತಾಲ್ಲೂಕುಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಬೇಕು. ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸಿ ಜೈವಿಕ ಅನಿಲ (ಬಯೋಗ್ಯಾಸ್) ತಯಾರಿಸುವ ಮೂಲಕ ಅಡುಗೆ ಅನಿಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು. ಇದರಿಂದ ಜಾಗತಿಕ ಯುದ್ಧ ಹಾಗೂ ಇಂಧನ ಬಿಕ್ಕಟ್ಟಿನ ಪರಿಣಾಮಗಳಿಂದ ಸ್ವಲ್ಪಮಟ್ಟಿಗೆ ರಕ್ಷಣೆ ಪಡೆಯಲು ಸಾಧ್ಯ ಎಂದು ಸಲಹೆ ನೀಡಿದರು. 

ಕರ್ನಾಟಕವು ಸಮೃದ್ಧಿಯ ನಾಡಾಗಿದ್ದು, ಕಾವೇರಿ ತಾಯಿಯ ನೆಲವಾಗಿದೆ. ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಆಶಯ ವ್ಯಕ್ತಪಡಿಸಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಶುಭ ಹಾರೈಸಿದರು.

ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಬಿ.ಜಿ.ಅನಂತ ಶಯನ ಅವರು ಮಾತನಾಡಿ, ಕನ್ನಡ ಎನ್ನುವುದು ಹೃದಯದಿಂದ ಬರುವ ಭಾಷೆಯಾಗಲಿ ಎಂದು ಹಾರೈಸಿದರು.

ಸಮಾಜ ಸೇವಕ ಹರಪಳ್ಳಿ ರವೀಂದ್ರ ಅವರು ಮಾತನಾಡಿ, ಕನ್ನಡ ಭಾಷೆ ಸಂಪದ್ಭರಿತವಾಗಿದ್ದು, ಸುಲಲಿತವಾಗಿ ಮಾತನಾಡಲು ಸಾಧ್ಯವಾಗುವ ಭಾಷೆಯಾಗಿದೆ. ಆದ್ದರಿಂದ ಕನ್ನಡ ಭಾಷೆಯನ್ನು ಪೋಷಿಸಿ, ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಆಂಗ್ಲಭಾಷೆಯನ್ನು ವ್ಯವಹಾರಿಕವಾಗಿ ಬಳಸಿಕೊಳ್ಳುವುದರ ಜೊತೆಗೆ ಕನ್ನಡ ಭಾಷೆಗೆ ಸೂಕ್ತ ಮಾನ್ಯತೆ ನೀಡಿ ಗೌರವಿಸಬೇಕು ಎಂದು ಕರೆ ನೀಡಿದರು. 

ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ನಿರಂತರ ಪ್ರಯತ್ನ ಹಾಗೂ ಬದ್ಧತೆ ಅಗತ್ಯ. ಪ್ರತಿಯೊಬ್ಬರೂ ಪರಿಶ್ರಮದಿಂದ ಮುನ್ನಡೆಯುವ ಮೂಲಕ ತಮ್ಮ ಗುರಿ ತಲುಪಬೇಕು ಎಂದು ಸಲಹೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಹಿರಿಮೆಯನ್ನು ಮೂರ್ನಾಡು ಹೋಬಳಿಯ ಪ್ರತಿಯೊಂದು ಗ್ರಾಮಕ್ಕೂ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
 
ಕನ್ನಡ ಹಬ್ಬವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು. ಕನ್ನಡ ಭಾಷೆಯ ಹಿರಿಮೆ ಎತ್ತಿಹಿಡಿಯುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.
ದಾನಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಹಕಾರದೊಂದಿಗೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಶ್ರಮಿಸಿದ ಫಲವಾಗಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. 

ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಎಸ್.ಎಸ್.ಸಂಪತ್ ಕುಮಾರ್, ರೇವತಿ ರಮೇಶ್,  ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ತಾ.ಪಂ.ಇಒ ಶೇಖರ್, ಮಾಜಿ ಸದಸ್ಯ ಆನಂದ ರಘು, ಹೊಸ್ಕೇರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಹಾಕತ್ತೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ, ಹೊದ್ದೂರು ಪಂಚಾಯಿತಿ ಅಧಿಕಾರಿ ವತ್ಸಲಾಕುಮಾರಿ ಪ್ರಮುಖರಾದ ಕಾಂಗೀರ ಸತೀಶ್, ಕೃಷ್ಣರಾಜ್, ಶೋಭಾರಾಣಿ, ಬಿದ್ರುಪಣೆ ಬಸಪ್ಪ, ಸಮಿತಿ ಪದಾಧಿಕಾರಿಗಳು ಇದ್ದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ  ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 26 ಸಾಧಕರು, ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಮೂರ್ನಾಡು ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮೂರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು  ರೈತಗೀತೆ ಹಾಡಿದರು. ಕಸಾಪ ಪ್ರತಿನಿಧಿಗಳಾದ ಮೀನಾಕ್ಷಿ ಕೇಶವ್ ಸ್ವಾಗತಿಸಿದರು, ತೇಜಸ್ ಪ್ರಸಾದ್, ಕಟ್ಟೆಮನೆ ಸೋನಜಿತ್, ಮಾಳಿಗೆ ಮನೆ ವೆಂಕಟೇಶ್, ಬಿದ್ರುಪಣೆ ದೀಪಿಕಾ, ಕಲ್ಲುಮುಟ್ಲು ಜಶ್ಮಿ, ಪರಿಚನ ಸೋನಿ ನಿರೂಪಿಸಿದರು. ಕೊಂಪುಳೀರ ಮಮತ ವಂದಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಭಾರತಿ ಜೂನಿಯರ್ ಕಾಲೇಜಿನಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಮೆರವಣಿಗೆ ನಡೆಯಿತು. ಸಮಾಜ ಸೇವಕರಾದ ಎಡಿಕೇರಿ ಪ್ರಸನ್ನ ಹಾಗೂ ಅವರೆಮಾದಂಡ ಶರಣ್ ಪೂಣಚ್ಚ ಮೆರವಣಿಗೆಗೆ ಚಾಲನೆ ನೀಡಿದರು. ಡೊಳ್ಳುಕುಣಿತ, ಪೂಜಾ ಕುಣಿತ, ಚಿಲಿಪಿಲಿ ಕುಣಿತ, ಗೊಂಬೆಗಳ ನೃತ್ಯ, ವಿದ್ಯಾರ್ಥಿಗಳಿಂದ ಲೆಸಿಮ್ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ "ಕನ್ನಡ ಸಿರಿ"ಸ್ಮರಣ ಸಂಚಿಕೆಯ ಮುಖಪುಟ, ಸಾಹಿತಿ ಕಿಗ್ಗಲು ಗಿರೀಶ್ ಅವರು ಬರೆದ "ನಾಪತ್ತೆಯಾದ ನಿವ್ಯಾವತಿ" ಪುಸ್ತಕ ಬಿಡುಗಡೆ ಮಾಡಲಾಯಿತು. 

ಮೂರ್ನಾಡು ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮೂರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು  ರೈತಗೀತೆ ಹಾಡಿದರು. 
ಕಸಾಪ ಜಿಲ್ಲಾಧ್ಯಕ್ಷರಾದ ಎಂ.ಪಿ,.ಕೇಶವಕಾಮತ್ ರಾಷ್ಟ್ರ ಧ್ವಜ, ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ನಾಡ ಧ್ವಜಾರೋಹಣ ಮಾಡಿದರು.