Kodagu

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳಿಸಲು 5 ಕೋಟಿ ಅನುದಾನ ಬಿಡುಗಡೆ; ಟೆಂಡರ್ ಪ್ರಕ್ರಿಯೆ ತ್ವರಿತಗೊಳಿಸಲು ಶಾಸಕ ಡಾ. ಮಂತರ್ ಗೌಡ ಸೂಚನೆ

admincoorgdaily

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳಿಸಲು 5 ಕೋಟಿ ಅನುದಾನ ಬಿಡುಗಡೆ; ಟೆಂಡರ್ ಪ್ರಕ್ರಿಯೆ ತ್ವರಿತಗೊಳಿಸಲು ಶಾಸಕ ಡಾ. ಮಂತರ್ ಗೌಡ ಸೂಚನೆ
ಮಡಿಕೇರಿ;
ಕೊಡವ ಹೆರಿಟೇಜ್ ಸೆಂಟರ್‌ನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ₹5 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಶೀಘ್ರದಲ್ಲೇ ಕಾಮಗಾರಿಗಳಿಗೆ ಚಾಲನೆ ನೀಡುವ ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಇಂದು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ಕೊಡಗಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುವ ಕೊಡವ ಹೆರಿಟೇಜ್ ಸೆಂಟರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಇಲಾಖೆಯ ಆಯುಕ್ತರಿಗೆ ಮನವಿ ಮಾಡಿದರು.

ಕೊಡಗಿನ ಸಾಂಸ್ಕೃತಿಕ ವೈಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೊಡವ ಹೆರಿಟೇಜ್ ಸೆಂಟರ್ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಶಾಸಕರು ವಿಶೇಷ ಆಸಕ್ತಿ ವಹಿಸಿದ್ದಾರೆ.