ಚೆನ್ನಯನಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
admincoorgdaily

ಪೊನ್ನಂಪೇಟೆ, ಆ.15: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚೆನ್ನಯನಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಆಡಳಿತ ವೈದ್ಯಾಧಿಕಾರಿ ಡಾ. ಶಿವಪ್ಪ ಎಸ್. ಗೋಟ್ಯಾಳ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಜಾತಿ, ಧರ್ಮ ಹಾಗೂ ಮತಭೇದಗಳನ್ನು ಬದಿಗಿಟ್ಟು ದೇಶದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಮಾಜಿ ಅಧ್ಯಕ್ಷ ಅರುಣ ಮಾತನಾಡಿ, ಯುವಜನರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆದು, ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ನಾಳಿನ ನಾಯಕರಾಗಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಚೆನ್ನಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ವಿಜು, ಮಾಜಿ ಅಧ್ಯಕ್ಷ ಅರುಣ, ಪಿಡಿಒ ಪ್ರಕಾಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮದ ಮುಖಂಡರಾದ ಗಣೇಶ, ನಾಸೀರ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.