ಫೆ.9ರಂದು ಐಗೂರಿನಲ್ಲಿ 9ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
admincoorgdaily

ಮಡಿಕೇರಿ: ಫೆ.೯ರಂದು ಐಗೂರಿನ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ ೬.೩೦ ಗಂಟೆಗೆ ಧಜ್ವಾರೋಹಣ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ದಂಡಾಧಿಕಾರಿ ಮತ್ತು ತಹಶೀಲ್ದಾರ್ ಕೆ.ಕೆ.ಕೃಷ್ಣ ಮೂರ್ತಿ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ. ನಂತರ ಧ್ವಾರಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ ೮.೫೦ ಗಂಟೆಗೆ ಸಮ್ಮೇಳನಾಧ್ಯಕ್ಷೆ ಜಲಜಾಶೇಖರ್ ಅವರ ಮೆರವಣಿಗೆ ಐಗೂರು ಕಬ್ಬಿಣ ಸೇತುವೆಯಿಂದ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಮಂಗಳವಾದ್ಯ, ಪೂರ್ಣಕುಂಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾತಂಡಗಳು, ಸ್ತಬ್ಧ ಚಿತ್ರಗಳು, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಯುವಕ ಯುವತಿ ಮಂಡಳಿಗಳ ಸದಸ್ಯರುಗಳು, ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರುಗಳು, ಶಿಕ್ಷಕರುಗಳು ಆಟೋ, ಟ್ಯಾಕ್ಸಿ ಚಾಲಕರುಗಳು, ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ, ಗ್ರಾಮಸ್ಥರ ಮುಂದಾಳತ್ವದಲ್ಲಿ ಮೆರವಣಿಗೆ ನಡೆಯಲಿದೆ ಎಂದು ವಿವರಿಸಿದರು.
ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಅಂದು ಬೆಳಗ್ಗೆ ೧೦.೩೦ ಗಂಟೆಗೆ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ, ಶಾಸಕ ಡಾ.ಮಂತರ್‌ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯಧುವೀರ್ ಇತರರು ಕನ್ನಡ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ನಂತರ ಗೀತಗಾಯನ ಕಾರ್ಯಕ್ರಮ, ವಿಚಾರಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನಗಳು ನಡೆಯಲಿದೆ. ಸಂಜೆ ೫ ಗಂಟೆಗೆ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು, ಪ್ರಮುಖರಾದ ನಂಗಾರು ಕೀರ್ತಿಪ್ರಸಾದ್ ಉಪಸ್ಥಿತರಿದ್ದರು.