ವಯೋನಿವೃತ್ತ ಶಿಕ್ಷಕಿಯರಿಗೆ ಆತ್ಮೀಯ ಸನ್ಮಾನ
admincoorgdaily

ವಿರಾಜಪೇಟೆ: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಿಕ್ಷಕಿಯರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪವೀನಾ ಹಾಗೂ ಹೆಗ್ಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೇಮಲತಾ ಅವರನ್ನು ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಇಬ್ಬರೂ ಶಿಕ್ಷಕಿಯರು ಸಲ್ಲಿಸಿದ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹಾಗೂ ಶಾಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದಾಗಿದ್ದು, ಅವರ ನಿವೃತ್ತ ಜೀವನ ಸುಖ-ಸಂತೋಷ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಸಂಘದ ವತಿಯಿಂದ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.