ಮನೆ ಅಂಗಳದಲ್ಲಿ ಒಂಟಿ ಸಲಗ,ಗ್ರಾಮಸ್ಥರಲ್ಲಿ ಆತಂಕ

Jun 2, 2026 - 11:57
 0  882
ಮನೆ ಅಂಗಳದಲ್ಲಿ ಒಂಟಿ ಸಲಗ,ಗ್ರಾಮಸ್ಥರಲ್ಲಿ ಆತಂಕ

ಸಿದ್ದಾಪುರ; ಕಾಡಾನೆಯೊಂದು ದಿಢೀರ್ ಆಗಿ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರನ್ನು ಭಯಭೀತಗೊಳಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ಲೂರು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಒಂಟಿ ಸಲಗವೊಂದು ಗ್ರಾಮದ ವಿವೇಕ್ ಅವರ ಮನೆಯೊಂದರ ಆವರಣಕ್ಕೆ ನುಗ್ಗಿದ್ದು, ಅದನ್ನು ಕಂಡ ಸ್ಥಳೀಯರು ಆತಂಕಗೊಂಡು ಸುರಕ್ಷಿತ ಸ್ಥಳಗಳಿಗೆ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

 ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಅರಣ್ಯ ಅಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಜನವಸತಿ ಪ್ರದೇಶಗಳಿಗೆ ನುಗ್ಗುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಾಫಿ ತೋಟಗಳು, ಕೃಷಿ ಜಮೀನುಗಳು ಹಾಗೂ ಗ್ರಾಮಗಳೊಳಗೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ.

ವಾಲ್ನೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ರಾತ್ರಿ ವೇಳೆ ಮಾತ್ರವಲ್ಲದೆ ಹಗಲಿನಲ್ಲಿಯೂ ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಕಾಡಾನೆಗಳ ಉಪಟಳಕ್ಕೆ ಕಡಿವಾಣ ಹಾಕಿ ಜನರ ಜೀವ ಹಾಗೂ ಆಸ್ತಿಪಾಸ್ತಿಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 2
Wow Wow 0