ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಎ.ಎಸ್. ಪೊನ್ನಣ್ಣ
admincoorgdaily

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯ ಕುರಿತು ಪರಿಶೀಲನೆ ನಡೆಸಿ, ಬಾಕಿ ಇರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆರ್.ಡಿ.ಪಿ.ಆರ್. ಇಲಾಖೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ ಹಾಗೂ ನಿವೇಶನ ಹಂಚಿಕೆ ಬಗ್ಗೆ ಹಾಗೂ ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.