Kodagu

ಮಾಸಿಕ ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ

admincoorgdaily

ಮಡಿಕೇರಿ: ಮಾಸಿಕ ಕನಿಷ್ಠ ೧೦ ಸಾವಿರ ರೂ. ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದ ಗಾಂಧಿ ಮೈದಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಂತರ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ನಗರದ ಬಾಲಭವನದಲ್ಲಿ ಸಮಾಪ್ತಿಗೊಂಡಿತು. ಈ ಸಂದರ್ಭ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ಮಾತನಾಡಿ, ಗೌರವಧನ ಹೆಚ್ಚಳ ಸಂಬಂಧ ಜನವರಿಯಲ್ಲಿ ಪ್ರತಿಭಟನೆ ನಡೆಸಿ, ೧೫ ಸಾವಿರ ರೂ. ನಿಶ್ಚಿತ ಗೌರವಧನ ನಿಗದಿಪಡಿಸಲು ಆಗ್ರಹಿಸಲಾಗಿತ್ತು. ಆಗ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ೨೦೨೫ರ ಏಪ್ರಿಲ್‌ನಿಂದ ಪ್ರತಿ ತಿಂಗಳು ಕನಿಷ್ಠ ೧೦ ಸಾವಿರ ರೂ. ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈ ಬಗ್ಗೆ ಈವರೆಗೂ ಯಾವುದೇ ಆದೇಶ ಹೊರಡಿಸಿಲ್ಲ. ಆದ್ದರಿಂದ ಮತ್ತೆ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಸಂಘದ ಜಿಲ್ಲಾಧ್ಯಕ್ಷೆ ಪೂರ್ಣಿಮ ಮಾತನಾಡಿ, ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ ೧ ಸಾವಿರ ರೂ. ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟಿಸಲಾಗುತ್ತಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ನಾಗಮಣಿ, ಆಶಾ ಕಾರ್ಯಕರ್ತೆಯರಾದ ಶಾಂತಿ, ವನಿತಾ, ಶ್ರೀಮತಿ ಸೇರಿದಂತೆ ೨೫೦ಕ್ಕೂ ಅಧಿಕ ಆಶಾಕಾರ್ಯಕತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.