Kodagu

ಮಾಸಿಕ ಕನಿಷ್ಠ 10 ಸಾವಿರ ರೂ, ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆಗಸ್ಟ್ 12ರಿಂದ 14ರವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ

admincoorgdaily

ಮಡಿಕೇರಿ: ಮಾಸಿಕ ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.12ರಿಂದ 14ರವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದರು.

 ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಧನ ಹೆಚ್ಚಳ ಸಂಬಂಧ ಜನವರಿಯಲ್ಲಿ ಪ್ರತಿಭಟನೆ ನಡೆಸಿ, 15 ಸಾವಿರ ರೂ. ನಿಶ್ಚಿತ ಗೌರವಧನ ನಿಗದಿಪಡಿಸಲು ಆಗ್ರಹಿಸಲಾಗಿತ್ತು. ಆಗ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 2025ರ ಏಪ್ರಿಲ್‌ನಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ರೂ. ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈ ಬಗ್ಗೆ ಈವರೆಗೂ ಯಾವುದೇ ಆದೇಶ ಹೊರಡಿಸಿಲ್ಲ. ಆದ್ದರಿಂದ ಮತ್ತೆ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಸಂಘದ ಜಿಲ್ಲಾಧ್ಯಕ್ಷೆ ಪೂರ್ಣಿಮ ಮಾತನಾಡಿ, ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ 1 ಸಾವಿರ ರೂ. ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟಿಸಲಾಗುವುದು. ಅಂದು ಬೆಳಗ್ಗೆ 11 ಗಂಟೆಗೆ ನಗರದ ಭಾಲಭವನದಿಂದ ಹಳೇ ಖಾಸಗಿ ಬಸ್ ನಿಲ್ದಾಣ ಮೂಲಕ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ವರೆಗೆ ಮೆರವಣಿಗೆ ಸಾಗಿ ಭಾಲಭವನದಲ್ಲಿ ಸಮಾವೇಶಗೊಳ್ಳಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ನಾಗಮಣಿ, ಆಶಾ ಕಾರ್ಯಕರ್ತೆಯರಾದ ಶಾಂತಿ, ವನಿತಾ, ಶ್ರೀಮತಿ ಇದ್ದರು.