ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ: 12 ಆರೋಪಿಗಳ ಮೊಬೈಲ್‌ಗಳು ಎಫ್‌ಎಸ್‌ಎಲ್ ಗೆ ರವಾನೆ
ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಚಿತ್ರಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಪ್ರಕರಣದಲ್ಲಿ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಆರೋಪಿಗಳ ಮೊಬೈಲ್‌ಗಳಿಂದ ಅಳಿಸಲಾದ ದತ್ತಾಂಶವನ್ನು ಮರುಪಡೆಯಲು ಒಟ್ಟು 12 ಮೊಬೈಲ್ ಫೋನ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ. ಎಫ್‌ಎಸ್‌ಎಲ್‌ನ ವರದಿ ಬಂದ ನಂತರ ಆರೋಪಿಗಳ ಸಾಮಾಜಿಕ ಜಾಲತಾಣ ಖಾತೆಗಳ ವಿವರಗಳು, ಸಂದೇಶಗಳು ಮತ್ತು ಅಳಿಸಲಾದ ವಿಷಯಗಳನ್ನು ಪಡೆದು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯ ಘನತೆ ಮತ್ತು ಗೌರವಕ್ಕೆ ಧಕ್ಕೆಯಾಗುವ ರೀತಿಯ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳಿಗೆ ಸಂಬಂಧಿಸಿದಂತ ಈವರೆಗೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲ ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಯ ನಂತರ ರಮ್ಯಾ ತಮ್ಮ ‘ಎಕ್ಸ್’ ಖಾತೆಯಲ್ಲಿ “ಭಾರತದ ಸಾಮಾನ್ಯ ಜನತೆಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣದಂತಿದೆ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ಪೋಸ್ಟ್ ಮಾಡಿದ್ದರು.
ಈ ಪೋಸ್ಟ್‌ನ ನಂತರ, ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅವಹೇಳನಕಾರಿ ಮತ್ತು ಬೆದರಿಕೆ ಸಂದೇಶಗಳು ಬಂದಿದ್ದು, ಅವುಗಳ ಸ್ಕ್ರೀನ್‌ಶಾಟ್ ತೆಗೆದು ಅವರು ಪೊಲೀಸರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು.