ಸುರಕ್ಷಿತ ಜಾಗಕ್ಕೆ ಸ್ಥಳಾಂತರವಾಗುವಂತೆ ಮನವಿ "ಬೆಟ್ಟಗುಡ್ಡ, ನದಿ ತೀರದವರು ಎಚ್ಚರ": ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಟ್ಟಗುಡ್ಡ ಹಾಗೂ ನದಿ ತೀರ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವಾಸಿಗಳು ಜಿಲ್ಲಾಡಳಿತ ಸೂಚಿಸಿರುವ ಸುರಕ್ಷಿತ ಸ್ಥಳಗಳಿಗೆ ತೆರಳಿ ಆಶ್ರಯ ಪಡೆಯುವಂತೆ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮನವಿ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, "ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಬೆಟ್ಟಗುಡ್ಡಗಳಲ್ಲಿ ವಾಸಿಸುವವರು ಹಾಗೂ ನದಿ ತೀರದ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ತಮ್ಮ ಸಾಕು ಪ್ರಾಣಿಗಳು ಹಾಗೂ ಜಾನುವಾರುಗಳನ್ನು ಕೂಡ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು" ಎಂದು ಹೇಳಿದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟಣ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಮಳೆಯಿಂದಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಈಗಾಗಲೇ ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮಳೆ ಹೆಚ್ಚಾದ ಸಂದರ್ಭದಲ್ಲಿ ಬೆಟ್ಟಗುಡ್ಡ ಹಾಗೂ ನದಿ ತೀರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಆಶ್ರಯ ಕಲ್ಪಿಸಲು ತಾಲೂಕು ಆಡಳಿತದ ವತಿಯಿಂದ ಪರಿಹಾರ ಕೇಂದ್ರಗಳನ್ನು ಗುರುತಿಸಲಾಗಿದೆ. ಅಮತ್ತಿ ಹೋಬಳಿ ವ್ಯಾಪ್ತಿಯ ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳಾದ ಕೊಂಡಂಗೆರಿ, ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮದ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ನದಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಯಾರೂ ಕೂಡ ನದಿಗೆ ಇಳಿಯಬಾರದು ಎಂದು ಮನವಿ ಮಾಡಿದರು.