Kodagu

ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ

admincoorgdaily

ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ

ಸುಂಟಿಕೊಪ್ಪ, ಜು.20:ಮಾದಕ ವಸ್ತುಗಳ (ಡ್ರಗ್ಸ್) ದುರುಪಯೋಗವು ವ್ಯಕ್ತಿಯ ದೈಹಿಕ, ಮಾನಸಿಕ ಆರೋಗ್ಯವನ್ನು ನಾಶಪಡಿಸುವುದಲ್ಲದೆ, ಕುಟುಂಬ ಮತ್ತು ಸಮಾಜದ ಮೇಲೆ ಗಂಭೀರ ದುಷ್ಪರಿಣಾಮಗಳನ್ನು ಬೀರುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಯುವ ಜನತೆಯನ್ನು ದುಶ್ಚಟಗಳಿಂದ ರಕ್ಷಿಸಲು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ

ಎಂದು ಮಡಿಕೇರಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಎನ್.ಪಿ.ನವೀನ್ ಕರೆ ನೀಡಿದರು.

     ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘ, ಇಕೋ ಕ್ಲಬ್ ಹಾಗೂ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮದಡಿ

ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಕುರಿತು ಏರ್ಪಡಿಸಿದ್ದ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

 ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಯಾವುದೇ ದುಶ್ಚಟಗಳಿಂದ ದೂರವಿದ್ದು, ನಶಮುಕ್ತ ಭಾರತ ನಿರ್ಮಾಣಕ್ಕೆ ಪಣತೊಡಬೇಕು ಎಂದು ನವೀನ್ ಹೇಳಿದರು.

   ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಮದ್ಯಪಾನ, ಧೂಮಪಾನದಂತಹ ದುಶ್ಚ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ತುಂಬಾ ಕಷ್ಟ ಎಂಬುದನ್ನು ಅವರು ತಿಳಿ ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸೋಮಯ್ಯ ಮಾತನಾಡಿ,ಸಾಕಷ್ಟು ಯುವ ಪೀಳಿಗೆ ದಿನೇ ದಿನೇ ಮಾದಕ ವ್ಯಸನಿಗಳಾಗುತ್ತಿರುವುದು ಬೇಸರದ ಸಂಗತಿಯಾಗಿದೆ.ಹಾಗೂ ಮಾದಕ ವಸ್ತು ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಹಾಗೂ ವಿಶೇಷವಾಗಿ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ. ಮಾದಕ ದ್ರವ್ಯ ಬಳಕೆಯು ಸಾಮಾಜಿಕ ಸಮಸ್ಯೆಯಾಗಿದ್ದು, ವಿದ್ಯಾರ್ಥಿಗಳು/ಯುವಕರು ಇದರ ವಿರುದ್ಧ ಧ್ವನಿ ಎತ್ತಬೇಕು’’ ಎಂದು ಸಲಹೆ ನೀಡಿದರು.

   ‌ ನಶಮುಕ್ತ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಸಂಕಲ್ಪ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,

  ದೇಶದ ಯುವ ಶಕ್ತಿ ಮಾದಕ ವ್ಯಸನಕ್ಕೆ ಮಾರಕವಾಗುತ್ತಿರುವುದರಿಂದ ಈ ಬಗ್ಗೆ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

   ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಂ.ರಮೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾದಕ ವ್ಯಸನಿಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಪಿ. ಸೈದಾಲವಿ, ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಡಿ.ಯು.ಬಿಂದುಕುಮಾರಿ, ಶಿಕ್ಷಕರಾದ ಕೆ.ಬಿ.ರಾಧಾಕೃಷ್ಣ,ಪಿ.ಎಚ್ .ರಜಿಯಾ,ಆರ್.ಯಶೋರಾಣಿ, ಕೆ. ಎಚ್ . ಗಾಯಿತ್ರಿ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕದೇಲಂಪಾಡಿ ಎಂ.ಚಿನ್ನಪ್ಪ,ಅತಿಥಿ ಶಿಕ್ಷಕರಾದ ಎನ್. ಪಿ. ವಾಣಿಶ್ರೀ , ಪಿ ಆರ್ .ವಿಮಲಾ ಇದ್ದರು.ವಿದ್ಯಾರ್ಥಿ ಸಂಘದ ನಾಯಕರು, ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಕ್ಕಳಿಂದ ರೂಪಕ ಪ್ರದರ್ಶನ:"ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು" ಕುರಿತು ಶಾಲೆಯ ಶಿಕ್ಷಕಿ ಆರ್. ಯಶೋರಾಣಿ ಅವರು ರೂಪಿಸಿದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ಗಮನ ಸೆಳೆದರು.

        ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದಷ್ಪರಿಣಾಮಗಳು ಮತ್ತು ಅದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡುವ ಫಲಕಗಳು ಹಾಗೂ ಘೋಷ ವಾಕ್ಯ ಹಿಡಿದಿದ್ದ ವಿದ್ಯಾರ್ಥಿಗಳು ಶಾಲಾ ಅಂಗಳದಲ್ಲಿ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದರು.