Kodagu

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

admincoorgdaily

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಡಿಕೇರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ರೂ.೧೮೭ ಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವ ಬಿ.ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ತನಿಖೆ ಅಂತಿಮ ಹಂತ ತಲುಪದೇ ಇರುವಾಗಲೇ ನಾಗೇಂದ್ರ ಅವರಿಗೆ ಮತ್ತೆ ಖಾತೆ ನೀಡಲಾಗಿದೆ. ಹಿಂದೆ ರೂ.೧೮೭ ಕೋಟಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಹರಿದಿದೆ ಎಂಬ ಗಂಭೀರ ಆರೋಪವಿದೆ. ಇಂತಹವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ ಅವರು,ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಸಂಪೂರ್ಣವಾಗಿ ಮುಳುಗಿದೆ. ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಬೋಪಯ್ಯ ಹೇಳಿದರು.

 ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲೀರ ಚಲನ್, ಮಹೇಶ್ ಜೈನಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ರವಿ ಕುಶಾಲಪ್ಪ, ಪಿ.ಎಂ.ರವಿ, ರಾಬೀನ್ ದೇವಯ್ಯ, ಜಗದೀಶ್, ಸತೀಶ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.