ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ‌ ಪ್ರತಿಭಟನೆ

Apr 24, 2026 - 17:03
 0  290
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ‌ ಪ್ರತಿಭಟನೆ

ಮಡಿಕೇರಿ: ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನಗರದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ನಿರತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಆರು ವರ್ಷದಿಂದ ಚುನಾವಣೆ ನಡೆಸದೆ ಸ್ಥಳೀಯ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ನಾಗರಿಕ ಆಡಳಿತದಲ್ಲಿ ಉಂಟಾಗಿರುವ ಸಂವಿಧಾನಿಕ ಬಿಕ್ಕಟ್ಟು ಇದು ಪ್ರಜಾಪ್ರಭುತ್ವದ ಅಣಕವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದರೆ ಮಾತ್ರ ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತದೆ.

ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆ ನಡೆಯದೆ ಇರುವುದರಿಂದ ಅನುದಾನಕ್ಕೆ ಕುತ್ತು ಆಗಿರುತ್ತದೆ. ಸರ್ಕಾರದ ಹಠಮಾರಿತನದಿಂದ ಕಳೆದ ಆರು ವರ್ಷದಿಂದ ಇಂದಿನವರೆಗೆ ಸತತವಾಗಿ ವಿವಿಧ ನೆಪಗಳನ್ನು ಒಡ್ಡುತ್ತಾ ಚುನಾವಣೆಗಳನ್ನು ಮುಂದೂಡಿಕೊಂಡು ಬಂದಿರುವುದು ಖಂಡನೀಯ.

ತಕ್ಷಣ ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಸೂಚನೆ ನೀಡುವಂತಾಗಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಬಿಜೆಪಿ ವಕ್ತಾರ ತಳೂರು ಎ.ಕಿಶೋರ್ ಕುಮಾರ್ , ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0