ಬೆಂಗಳೂರು | ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಬಂಧನ, ಇಬ್ಬರಿಗಾಗಿ ಶೋಧ

Oct 23, 2025 - 11:30
 0  1k
ಬೆಂಗಳೂರು | ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳ ಬಂಧನ, ಇಬ್ಬರಿಗಾಗಿ ಶೋಧ

ಬೆಂಗಳೂರು, ಅ. 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಬಂಧಿತರನ್ನು ಕಾರ್ತಿಕ್, ಗ್ಲೆನ್ ಹಾಗೂ ಸಿಯೋಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮಂಗಳವಾರ ರಾತ್ರಿ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಘಟನೆಯು ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ ಅಲ್ಲಿ ಇದ್ದ ಇಬ್ಬರು ಪುರುಷರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ನಂತರ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯ ಮೊಬೈಲ್ ಫೋನ್ ಹಾಗೂ ರೂ. 50,000 ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಇಬ್ಬರು ಪುರುಷರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತೀವ್ರತೆಯನ್ನು ಪರಿಗಣಿಸಿ ತನಿಖೆಯನ್ನು ಡಿವೈಎಸ್‌ಪಿ ನೆಲಮಂಗಲ ಅಧಿಕಾರಿಗಳಿಗೆ ವಹಿಸಲಾಗಿದೆ. ಮೂವರ ಬಂಧನದ ಬಳಿಕ ಉಳಿದ ಇಬ್ಬರನ್ನು ಪತ್ತೆಹಚ್ಚಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 3
Sad Sad 0
Wow Wow 1