ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಸುಟ್ಟು ಭಸ್ಮ : ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ
ಧಾರವಾಡ: ಅಣ್ಣಿಗೇರಿ ಸಮೀಪ ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಸಂಭವಿಸಿದೆ.
ಹಾವೇರಿ ಲೋಕಾಯುಕ್ತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಕ್ಷರಯ್ಯ ಸಾಲಿಮಠ (45) ಮೃತಪಟ್ಟ ಪೊಲೀಸ್ ಅಧಿಕಾರಿ. ಢಿಕ್ಕಿಯ ತೀವ್ರತೆಗೆ ಕಾರು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಸ್ಥಳೀಯರು ಕೂಡ ರಕ್ಷಣಾ ಕಾರ್ಯಕ್ಕೆ ಮುಂದಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಗದಗದತ್ತ ಹಿಂತಿರುಗುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆಯೆಂದು ಮೂಲಗಳು ತಿಳಿಸಿವೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ತಕ್ಷಣವೇ ಬೆಂಕಿ ಚಿಮ್ಮಿಕೊಂಡಿದೆ ಎಂದು ತಿಳಿದು ಬಂದಿದೆ.
ಘಟನೆಯ ನಂತರ ಅಣ್ಣಿಗೇರಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಲಾಗಿದೆ.
