State News

ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಇಬ್ಬರು ಸಜೀವ ದಹನ

admincoorgdaily

Photo credit: TV09 (ಕಾರು)

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಭೀಕರ ಕಾರು ಅಪಘಾತ ಸಂಭವಿಸಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಳಗಿದ್ದ ಇಬ್ಬರು ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.

ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ನಂಬರ್‌ಪ್ಲೇಟ್ ಸಹ ನಾಶವಾಗಿದೆ. ಇದರಿಂದ ವಾಹನದ ಹಾಗೂ ಮೃತರ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರಾಗಿರಬಹುದು ಎಂಬ ಮಾಹಿತಿ ಲಭ್ಯವಾಗಿದ್ದು, ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಈ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.