ಚಿಕ್ಕಬಳ್ಳಾಪುರ | ಟಿಪ್ಪರ್–ಬೈಕ್ ಡಿಕ್ಕಿ; ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು
admincoorgdaily

ಚಿಕ್ಕಬಳ್ಳಾಪುರ,: ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಅಜ್ಜವಾರ ಗ್ರಾಮದ ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಇವರಲ್ಲಿ ನರಸಿಂಹಮೂರ್ತಿ ಮತ್ತು ನಂದೀಶ್ ಅಣ್ಣತಮ್ಮಂದಿರಾಗಿದ್ದಾರೆ. ನಾಲ್ವರೂ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಿಂದ ಅಜ್ಜವಾರದತ್ತ ಸಾಗುತ್ತಿದ್ದ ವೇಳೆ, ಅಜ್ಜವಾರ ಕ್ರಾಸ್ ಬಳಿ ತಿರುವು ಪಡೆಯಲು ಯತ್ನಿಸಿದಾಗ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತ ನರಸಿಂಹಮೂರ್ತಿ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಜ್ಜವಾರ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.