ಘಟ್ಟದಳ್ಳ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Jan 16, 2026 - 16:34
 0  297
ಘಟ್ಟದಳ್ಳ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಸಿದ್ದಾಪುರ; ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟ್ಟದಳ್ಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಚೆನ್ನಯ್ಯನಕೋಟೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉತ್ಸಾಹಭರಿತವಾಗಿ ಜರುಗಿತು.

 ಸರ್ಕಾರಿ ಶಾಲಾ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಪೋಷಕರು ಹಾಗೂ ಸಮುದಾಯದ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿರಾಜಪೇಟೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ರಾಜೇಶ್ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಯುವ ಆಸಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಅವರಲ್ಲಿರುವ ಸೃಜನಶೀಲತೆ, ಸಂವಹನ ಕೌಶಲ್ಯ ಮತ್ತು ಅಡಗಿರುವ ಪ್ರತಿಭೆಯನ್ನು ಹೊರತರುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಕಲಿಕಾ ಹಬ್ಬದ ಚಟುವಟಿಕೆಗಳು ವಿಶೇಷವಾಗಿ ಸರ್ಕಾರಿ ಶಾಲೆಯ ಕಿರಿಯ ಪ್ರಾಥಮಿಕ ಹಂತದ ಮಕ್ಕಳಿಗಾಗಿ ರೂಪಿಸಲಾಗಿದ್ದು, ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

 ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಶೈಕ್ಷಣಿಕ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರದರ್ಶನಗಳು ನಡೆಯಿತು. ಮಕ್ಕಳ ಉತ್ಸಾಹಭರಿತ ಭಾಗವಹಿಸುವಿಕೆ ಎಲ್ಲರ ಗಮನ ಸೆಳೆದಿತು. ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಲಸ್ಟರ್ ಮಟ್ಟದ ಸಿಆರ್‌ಪಿ ಕೇಶವ ಮೂರ್ತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರುಕ್ಮಣಿ, ಶೈಲಜ, ವಿರಾಜಪೇಟೆ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಚೆನ್ನಯ್ಯನಕೋಟೆ ಹಾಗೂ ಚೆನ್ನಂಗಿ ಶಾಲೆಯ ಮುಖ್ಯ ಶಿಕ್ಷಕಿಯರಾದ ರಾಜಮ್ಮ, ಸುಷ, ಶಾಲೆ ಮುಖ್ಯ ಶಿಕ್ಷಕ ಅಶ್ರಫ್, ಸೇರಿದಂತೆ ಶಾಲಾ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0