Kodagu

ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು

admincoorgdaily

ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು

ಮಡಿಕೇರಿ ಜು.31 : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮಡಿಕೇರಿ ನಗರ ಠಾಣೆಯಲ್ಲಿ ದೂರು ನೀಡಿದೆ.

ದೂರು ನೀಡಿದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.

ವಿಳಂಬವಿಲ್ಲದೆ ಎಫ್‌ಐಆರ್ ದಾಖಲಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸಂಸತ್ ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಬ್ಬ ಸಜ್ಜನ ರಾಜಕಾಣಿಯಾಗಿದ್ದಾರೆ. ಆದರೆ ಇವರ ಕುರಿತು ಶಾಸಕ ಯಶಪಾಲ್ ಅವರು ದ್ವೇಷ ಭಾಷಣ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ವಂಶವನ್ನು ನಾಶ ಮಾಡುವುದಾಗಿ ಬೆದರಿಕೆ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಿಗೆ ವಿರುದ್ಧವಾದ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ. ಇವರ ಭಾಷಣದಿಂದ ಶಾಂತಿ ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿರುವುದರಿಂದ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯಶಪಾಲ್ ಅವರ ಹೇಳಿಕೆಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೇ ಪೊಲೀಸರು ಸಾಕ್ಷಿಯನ್ನಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡು ತನಿಖೆಗೆ ಮುಂದಾಗಬೇಕೆಂದು ಟಿ.ಪಿ.ರಮೇಶ್ ಮನವಿ ಮಾಡಿದರು.

ದೂರು ನೀಡುವ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಮೋಹನ್ ಮೌರ್ಯ, ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಹಾಜರಿದ್ದರು.