ದಿಲ್ಲಿ: 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಹತ್ಯೆ

ದಿಲ್ಲಿ: 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಹತ್ಯೆ

ಹೊಸದಿಲ್ಲಿ: ಈಶಾನ್ಯ ದಿಲ್ಲಿಯ ಜಾಫ್ರಾಬಾದ್ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು ಸುಮಾರು 48 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಫ್ರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಹಾಣ್ ಬಂಗೇರ್ ಪ್ರದೇಶದಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಫಜೀಲ್ (31) ಮತ್ತು ನದೀಮ್ (33) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತರು ದಾಳಿ ನಡೆಸಿದ್ದಾರೆ.

ಫಜೀಲ್ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ನದೀಮ್ ಅವರನ್ನು ಕುಟುಂಬದವರು ಜೆಪಿಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದಾಳಿಯ ಬಳಿಕ ಆರೋಪಿಗಳು ತಮ್ಮ ಸ್ಕೂಟರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಹಲವು ಜೀವಂತ ಕಾರ್ಟ್ರಿಡ್ಜ್‌ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪರಿಶೀಲನೆಗಾಗಿ ವಿಧಿವಿಜ್ಞಾನ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ.

ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 103(1), 3(5) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ 25 ಮತ್ತು 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಮೃತರ ಕುಟುಂಬದವರು ಈ ಹತ್ಯೆಗೆ ಹತ್ತಿರದ ಸಂಬಂಧಿಕರೇ ಕಾರಣವೆಂದು ಆರೋಪಿಸಿದ್ದು, ವೈಯಕ್ತಿಕ ವೈಮನಸ್ಯ ಹಿನ್ನೆಲೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ನಂತರ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.