State News

ಯುವತಿಯೊದಿಗೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ

admincoorgdaily

Photo credit: TV09

ಬೆಂಗಳೂರು, ಜ. 9: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್‌ನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮುನಿರುದ್ದೀನ್ ಖಾನ್ ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮನೆಯ ಮುಂದೆ ಬಿದ್ದಿದ್ದ ಪಾರ್ಸಲ್ ಬಾಕ್ಸ್‌ನ್ನು ಯುವತಿ ಒಳಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಯು ಸಾರ್ವಜನಿಕ ರಸ್ತೆಯಲ್ಲೇ ಅಸಭ್ಯವಾಗಿ ವರ್ತಿಸಿ ಆಕೆಯನ್ನು ಕರೆದಿದ್ದಾನೆ. ಬಳಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ವಿರೋಧ ವ್ಯಕ್ತಪಡಿಸಿದಾಗ, ಆಕೆಯ ಕೆನ್ನೆಗೆ ಹೊಡೆದು ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಬಳಿಕ ಯುವತಿ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಗರದಲ್ಲಿ ಮಹಿಳೆಯರ ಮೇಲಿನ ಅಸಭ್ಯ ವರ್ತನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.