ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ; ವಿಪತ್ತು ನಿರ್ವಹಣೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ: ಎಸ್.ಜೆ ಸೋಮಶೇಖರ್
ಮಡಿಕೇರಿ ಜೂ.02:-ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಮತ್ತೊಮ್ಮೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣ, ಕುಶಾಲನಗರದ ಪುರಸಭೆ ಸಭಾಂಗಣ ಹಾಗೂ ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಪ್ರತ್ಯೇಕವಾಗಿ ತಹಶೀಲ್ದಾರರು, ತಾ.ಪಂ.ಇಒಗಳು, ಎಂಜಿನಿಯರ್‍ಗಳು, ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜೊತೆ ವಿಪತ್ತು ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಈಗಾಗಲೇ ತಮ್ಮ ವ್ಯಾಪ್ತಿಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಕ್ರಮವಹಿಸಬೇಕು. ಮಳೆ ಸಂಬಂಧ ಪ್ರತಿನಿತ್ಯದ ಮುನ್ನೆಚ್ಚರಿಕಾ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಅಂಗನವಾಡಿ, ಶಾಲಾ ಕಾಲೇಜು ಕಟ್ಟಡಗಳ ಸುಸ್ಥಿತಿ ಬಗ್ಗೆ ಮತ್ತೊಮ್ಮೆ ಪರಿಶೀಲಿಸಬೇಕು. ಹೋಬಳಿಗೆ ನೇಮಕವಾಗಿರುವ ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು, ಹಾಗೆಯೇ ಗ್ರಾ.ಪಂ.ಅಧಿಕಾರಿಗಳು, ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರ ಮೊಬೈಲ್ ಸಂಖ್ಯೆಯನ್ನು ಜತನ ಮಾಡಿಕೊಂಡಿರಬೇಕು. ಸ್ಥಳೀಯ ವ್ಯಾಪ್ತಿಯಲ್ಲಿ ಜೆಸಿಬಿ ಹಾಗೂ ಸ್ವಯಂ ಸೇವಕರ ಮಾಹಿತಿ ಇರಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ರಸ್ತೆ ಬದಿ ಮಳೆ ನೀರು ಸರಾಗವಾಗಿ ಹರಿಯುವಂತಾಗಲು ಚರಂಡಿ ಸರಿಪಡಿಸಬೇಕು ಎಂದು ಎಂಜಿನಿಯರ್‍ಗಳಿಗೆ ಸೂಚಿಸಿದರು.
ವಿದ್ಯುತ್ ಕಂಬಗಳ ಸುಸ್ಥಿತಿ ಬಗ್ಗೆ ಆಗಾಗ ಗಮನಹರಿಸಬೇಕು. ವಿದ್ಯುತ್ ಪರಿವರ್ತಕಗಳ ನಿರ್ವಹಣೆ ಮತ್ತಿತರ ಬಗ್ಗೆ ಗಮನಹರಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಮಾಡಿಕೊಳ್ಳುವುದು ಸಾಂಕ್ರಾಮಿಕ ರೋಗ ಹರಡದಂತೆ ಎಲ್ಲೆಡೆ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಪ್ರತೀ ಗ್ರಾ.ಪಂ.ಗೆ ಹಣ ಬಿಡುಗಡೆ ಮಾಡುವಂತಾಗಬೇಕು. ಕೊಯನಾಡು ಸೇರಿದಂತೆ ಹಲವು ಶಾಲೆಗಳ ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದರು.
ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಬೇಕು. ಅಗ್ನಿಶಾಮಕ ಇಲಾಖೆಯವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರ ವಹಿಸಬೇಕು ಎಂದರು.
ರಸ್ತೆ ನಿರ್ಮಾಣ ಸಂಬಂಧ ಪ್ರಾಕೃತಿಕ ವಿಕೋಪ ಕಾಮಗಾರಿಗಳು ಇನ್ನೂ ಸಹ ಬಾಕಿ ಇದ್ದು, ಇವುಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿ ಜಿಲ್ಲೆಯ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಜೊತೆಗೂಡಿ ಸಮನ್ವಯತೆ ಸಾಧಿಸಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸುವಲ್ಲಿ ಮುಂದಾಗಲಾಗಿದೆ ಎಂದರು.
ಹೆದ್ದಾರಿಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಯಾವುದೇ ರೀತಿಯ ಅನಾಹುತ ಉಂಟಾಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು.
ತಾ.ಪಂ.ಇಒ ಶೇಖರ್ ಅವರು ಮಾತನಾಡಿ ಮಡಿಕೇರಿ ಕಸಬಾ, ಗಾಳಿಬೀಡು, ಹೊದ್ದೂರು, ಮಕ್ಕಂದೂರು, ಕೆ.ನಿಡುಗಣೆ, ಮದೆನಾಡು, ಮಕ್ಕಂದೂರು, ನಾಪೋಕ್ಲು, ಸಂಪಾಜೆ, ಭಾಗಮಂಡಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಹಾರ ಕಿಟ್ ವಿತರಣೆ, ಪ್ರವಾಹ ಪೀಡಿತ ಪ್ರದೇಶದಲ್ಲಿ ಕುಟುಂಬಗಳ ಸ್ಥಳಾಂತರ, ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಪ್ರಾಕೃತಿಕ ವಿಪತ್ತು ನಿರ್ವಹಣೆ ಸಂಬಂಧ ಈ ಹಿಂದೆ ಪ್ರತೀ ಗ್ರಾ.ಪಂ.ಗೆ 50 ಸಾವಿರ ರೂ. ನೀಡಲಾಗುತ್ತಿದ್ದು, ಅದನ್ನು ಒದಗಿಸುವಂತಾಗಬೇಕು ಎಂದು ಕೋರಿದರು.
ಕೊಯನಾಡು ಬಳಿ ಕಿಂಡಿ ಅಣೆಕಟ್ಟು ಬಳಿ ಮರದ ದಿಮ್ಮಿಗಳು ಸಿಲುಕಿ ಪ್ರವಾಹ ಉಂಟಾಗುತ್ತಿದೆ. ಇದರಿಂದ 6 ಕುಟುಂಬಗಳು ತೊಂದರೆಗೆ ಸಿಲುಕಲಿವೆ. ಆ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಕ್ರಮವಹಿಸಲಾಗುತ್ತದೆ ಎಂದರು.
ಭಾಗಮಂಡಲ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯದಿಂದ ದೂರವಾಣಿ ಸಂಪರ್ಕ ಕಡಿತಗೊಳ್ಳಲಿದೆ. ಹಾಗಾಗಿ ಇಂಧನ ಪೂರೈಸುವಂತಾಗಬೇಕು ಎಂದು ಪಿಡಿಒ ಅವರು ಕೋರಿದರು.
ತಹಶೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ಸಂಜನಾ, ತಾ.ಪಂ.ಇಒಗಳು ಲೋಕೋಪಯೋಗಿ, ಪಂಚಾಯತ್ ರಾಜ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸೆಸ್ಕ್, ಅಗ್ನಿಶಾಮಕ, ಅರಣ್ಯ, ಶಾಲಾ ಶಿಕ್ಷಣ, ಕಾರ್ಮಿಕ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
