Kodagu

ಗೋಣಿಕೊಪ್ಪದಲ್ಲಿ ರೈತ ಸಂಘದಿಂದ ಪ್ರತಿಭಟನೆ

admincoorgdaily

ಗೋಣಿಕೊಪ್ಪದಲ್ಲಿ ರೈತ ಸಂಘದಿಂದ ಪ್ರತಿಭಟನೆ

ಪೊನ್ನಂಪೇಟೆ,ಆ 23: ಕೊಡಗು ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮಿತಿಮೀರಿದ್ದು, ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿ ಹಸಿರು ಸೇನೆ, ಕೊಡಗು ಜಿಲ್ಲಾ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

 ಮನುಷ್ಯನ ಜೀವಕ್ಕೆ ಸೂಕ್ತ ರಕ್ಷಣೆ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಅರಣ್ಯ ಇಲಾಖೆ ವಿಫಲವಾಗಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಅವರು, ಆನೆ–ಮಾನವ ಸಂಘರ್ಷಕ್ಕೆ ತಕ್ಷಣವೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು. ಕಳೆದ ಒಂದು ತಿಂಗಳ ಅವಧಿಯಲ್ಲಿ ಆನೆ ದಾಳಿ ಹಾಗೂ ಸಾವು-ನೋವಿನ ಪ್ರಕರಣಗಳು ನಡೆದಿದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

 ಹಸಿರು ಸೇನೆ ಹಾಗೂ ಕೊಡಗು ಜಿಲ್ಲಾ ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಮಾತನಾಡಿ, ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ತೀವ್ರಗೊಂಡಿದ್ದು, ಶಾಲಾ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಪ್ರವಾಸಿಗರಿಗೂ ಸುರಕ್ಷತೆ ಇಲ್ಲದಂತಾಗಿದೆ. ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲೂ ಇಚ್ಛಾಶಕ್ತಿಯ ಕೊರತೆ ಕಂಡುಬರುತ್ತಿದೆ ಎಂದು ಆರೋಪಿಸಿದರು. “ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ವಿದ್ಯಾರ್ಥಿಗಳ ಪೋಷಕರಲ್ಲೂ ಆತಂಕ ಮನೆಮಾಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ,” ಎಂದು ಎಚ್ಚರಿಸಿದರು.

 ಕೊಡಗು ಪ್ರಮುಖ ಪ್ರವಾಸಿ ಜಿಲ್ಲೆಯಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ವನ್ಯಜೀವಿಗಳ ಭೀತಿ ಮುಂದುವರಿದರೆ ಪ್ರವಾಸಿಗರು ಜಿಲ್ಲೆಗೆ ಬರಲು ಹಿಂದೇಟು ಹಾಕುವ ಸಾಧ್ಯತೆಯಿದ್ದು, ಇದು ಜಿಲ್ಲೆಯ ಆರ್ಥಿಕತೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿದರು. ಆನೆಗಳು ಜನವಸತಿ ಪ್ರದೇಶಗಳಲ್ಲಿ ನಿರ್ಭೀತಿಯಿಂದ ಸಂಚರಿಸುತ್ತಿದ್ದರೂ ಅರಣ್ಯ ಇಲಾಖೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಸ್ಥಳೀಯರಿಗೆ ಅಗತ್ಯ ರಕ್ಷಣೆ ದೊರೆಯುತ್ತಿಲ್ಲ ಎಂಬ ಅಸಮಾಧಾನ ಸಾರ್ವಜನಿಕರಲ್ಲಿ ಇದೆ ಎಂದು ತಿಳಿಸಿದರು.

 ಇನ್ನೆರಡು ದಿನಗಳಲ್ಲಿ ಅರಣ್ಯ ಸಚಿವರು ಕೊಡಗಿಗೆ ಭೇಟಿ ನೀಡುವ ಮಾಹಿತಿ ಇದ್ದು, ಈ ವೇಳೆ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಭರತ್ ಮಾತನಾಡಿ, ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಯಿಂದ ಹಲವು ಸಾವು-ನೋವಿನ ಪ್ರಕರಣಗಳು ನಡೆದಿವೆ. ಆದರೂ ಅರಣ್ಯ ಇಲಾಖೆಯ ಕ್ರಮಗಳು ಪರಿಣಾಮಕಾರಿಯಾಗಿಲ್ಲ. ಜನರ ಸುರಕ್ಷತೆಯ ವಿಚಾರದಲ್ಲಿ ಸರ್ಕಾರಗಳು ಗಂಭೀರವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಆನೆ–ಮಾನವ ಸಂಘರ್ಷವನ್ನು ತಕ್ಷಣ ನಿಯಂತ್ರಿಸದಿದ್ದರೆ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರಿದರೆ ಅದರ ಸಂಪೂರ್ಣ ಹೊಣೆ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲಿದೆ ಎಂದು ಅವರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಸುಜಯ್ ಬೋಪಯ್ಯ, ಮಾಯಮುಡಿ ಗ್ರಾಮ ರೈತ ಸಂಘದ ಅಧ್ಯಕ್ಷ ಪುಚ್ಚಿಮಾಡ ರಾಯ್ ಮಾದಪ್ಪ, ಅಮ್ಮತ್ತಿ ಹೋಬಳಿ ರೈತ ಸಂಘದ ಅಧ್ಯಕ್ಷ ಅಜಿತ್, ಸಿ.ಡಿ. ಪೂಣಚ್ಚ, ಚಂದ್ರಶೇಖರ್, ಕಾರ್ಮಿಕ ಸಂಘದ ಪ್ರಮುಖ ಕುಟ್ಟಪ್ಪ , ರೈತ ಸಂಘದ ಕಾರ್ಯಕರ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.