State News

ಬಾಗಲಕೋಟೆ–ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರ ಸ್ಥಳದಲ್ಲೇ ಮೃತ್ಯು

admincoorgdaily

Photo credit: TV09

ಬಾಗಲಕೋಟೆ, ಡಿ.3: ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಿಂಭಾಗಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದಾರುಣ ಘಟನೆ ಸಂಭವಿಸಿದೆ.

ಅಪಘಾತ ಮಂಗಳವಾರ ರಾತ್ರಿ ಸುಮಾರು 1 ಗಂಟೆಯ ವೇಳೆಯಲ್ಲಿ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 17 ವರ್ಷದ ಪ್ರಜ್ವಲ್ ಶೇಡಬಾಳ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ಮೃತರನ್ನು ವಿಶ್ವನಾಥ ಕಂಬಾರ (17), ಗಣೇಶ್ ಅರಳಿಮಟ್ಟಿ (20), ಈಶು ಕಂಬಾರ, ಪ್ರವೀಣ ಶೇಡಬಾಳ (22) ಎಂದು ಗುರುತಿಸಲಾಗಿದೆ. ಎಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೇ ಎಂದು ಜಮಖಂಡಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಅತಿವೇಗದಲ್ಲಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿರುವುದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದವರು ಮದ್ಯಪಾನ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ. “ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತಾಂತ್ರಿಕ ಪರಿಶೀಲನೆ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ,” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಜಮಖಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.