ಜ.28 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆ; ಹಾಗೂ ಜ.30 ರಂದು ಹುತಾತ್ಮರ ದಿನ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ
ಮಡಿಕೇರಿ ಜ.13:-ಇದೇ ಜನವರಿ, 28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಾಗೂ ಜನವರಿ, 30 ರಂದು ಹುತಾತ್ಮರ ದಿನ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ರಾಷ್ಟ್ರದ ಪ್ರಥಮ ಸೇನಾ ಮಹಾ ದಂಡನಾಯಕ, ವೀರ ಸೇನಾನಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸೈನಿಕ ಶಾಲೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‍ಸಿಸಿ ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ನಗರದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಹೂವಿನ ಅಲಂಕಾರ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯವನ್ನು ನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಪೊಲೀಸ್ ವಾದ್ಯ ತಂಡದಿಂದ ಗೌರವ ಸಮರ್ಪಣೆ, ರಾಷ್ಟ್ರಗೀತೆ ನುಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜನರೂ ಪಾಲ್ಗೊಳ್ಳುವಂತಾಗಬೇಕು. ರಾಷ್ಟ್ರದ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು.
ಹುತಾತ್ಮರ ದಿನ: ಇದೇ ಜನವರಿ, 30 ರಂದು ಹುತಾತ್ಮರ ದಿನ ಆಯೋಜನೆ ಬಗ್ಗೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಜನವರಿ, 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಹೊರ ತೆಗೆದು ಹೂವಿನ ಅಲಂಕೃತದೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಪೊಲೀಸ್ ವಾದ್ಯದೊಂದಿಗೆ ಗೌರವ ಸಲ್ಲಿಸಿ, ನಂತರ ಜಿಲ್ಲಾಡಳಿತ ಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಮೂಲಕ ಸಾಗಿ ಗಾಂಧಿ ಮಂಟಪದಲ್ಲಿ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ನಂತರ ಪೊಲೀಸ್ ವಾದ್ಯದೊಂದಿಗೆ ಗೌರವ ವಂದನೆ ಸಲ್ಲಿಸಿ, ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಭದ್ರವಾಗಿ ಇಡಲಾಗುತ್ತದೆ. ಈ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ‘ಗಾಂಧಿ ಸ್ಮಾರಕ ಉದ್ಯಾನವನ’ ಕಾಮಗಾರಿ ಅರ್ಧಕ್ಕೆ ನಿಂತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಈ ಹಿಂದೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆಯಾಗಿತ್ತು. ಇನ್ನು 55 ಲಕ್ಷ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಯಾವುದೇ ಕಾರ್ಯ ಪ್ರಗತಿ ಆಗದಿರುವುದು ನೋವಿನ ಸಂಗತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶಾಸಕರು ಅನುದಾನ ಬಿಡುಗಡೆಗೆ ಸತತ ಪ್ರಯತ್ನ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಮುಂದಿನ ಬಜೆಟಿನಲ್ಲಿ ಅನುದಾನ ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಕಾನೆಹಿತ್ಲು ಮೊಣ್ಣಪ್ಪ, ತಹಶೀಲ್ದಾರ್ ಶ್ರೀಧರ, ಓಂಕಾರೇಶ್ವರ ದೇವಾಲಯದ ಆಡಳಿತಾಧಿಕಾರಿ ದೇವರಾಜು, ಅಂಬೆಕಲ್ಲು ನವೀನ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸ್ವಿಕ್ವೇರಾ, ನಗರಸಭೆಯ ನಿಶಾ, ಇತರರು ಹಲವು ಸಲಹೆ ನೀಡಿದರು.