ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ: ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಹರಪಳ್ಳಿ ರವೀಂದ್ರ ಕರೆ

ಕುಶಾಲನಗರ: ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ( ಎಸ್.ಡಿ.ಎಂ.ಸಿ.) ಯ ವತಿಯಿಂದ ಶನಿವಾರ ದಾನಿಗಳ ನಡಿಗೆ ಸರ್ಕಾರಿ ಶಾಲೆಯೆಡೆಗೆ ಎಂಬ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಮಕ್ಕಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರೂ ಆದ ದಾನಿ ಹರಪಳ್ಳಿ ರವೀಂದ್ರ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.
ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಹರಪಳ್ಳಿ ರವೀಂದ್ರ, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮ, ಸತತ ಪ್ರಯತ್ನ ನಿರಂತರ ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು. ಸರ್ಕಾರಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ತಾವು ಪ್ರತಿ ವರ್ಷ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ನೀಡುತ್ತಾ ಬರಲಾಗುತ್ತಿದೆ ಎಂದರು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರ ತಂಡವಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಕಲಿಕೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಂಡು ಪೋಷಕರು ಮತ್ತು ಸಮಾಜದ ಋಣವನ್ನು ತೀರಿಸುವ ಮೂಲಕ ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕು ಎಂದರು. ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ತತ್ವಾದರ್ಶನಗಳನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು. ಮಕ್ಕಳು ಆತ್ಮವಿಶ್ವಾಸದಿಂದ ಶ್ರದ್ಧೆ ಹಾಗೂ ಛಲದಿಂದ ಅಭ್ಯಾಸ ಮಾಡಿದರೆ ಗುರಿ ತಲುಪಲು ಸಾಧ್ಯ ಎಂದು ರವೀಂದ್ರ ಸಲಹೆ ನೀಡಿದರು.
ಸರ್ಕಾರಿ ಶಾಲೆಗಳ ಸಮುದಾಯ ಸಹಭಾಗಿತ್ವ ಯೋಜನೆಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘ- ಸಂಸ್ಥೆಗಳು ಕೈಜೋಡಿಸಬೇಕು ಎಂದರು. ತಮ್ಮನ್ನು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ದಾನಿ ಹರಪಳ್ಳಿ ರವೀಂದ್ರ ಅವರು, ತಮ್ಮ ದುಡಿಮೆಯ ಒಂದಷ್ಟು ಪಾಲನ್ನು ಸಹಾಯ ಹಸ್ತದಿಂದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಗಳಿಗೆ ನಿರಂತರವಾಗಿ ಸಹಾಯಹಸ್ತ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.
ಕೂಡಿಗೆಯ ನಿವೃತ್ತ ಶಿಕ್ಷಕ ರಾಜೇಗೌಡ ಮಾತನಾಡಿ, ತಾವು ದುಡಿದು ಗಳಿಸಿದ್ದರಲ್ಲಿ ಸ್ವಲ್ಪಭಾಗವನ್ನು ದೀನರಿಗೆ ಮತ್ತು ಬಡ ಮಕ್ಕಳ ಬಾಳಿಗೆ ನೀಡುವುದರಿಂದ ಅವರ ಬದುಕು ದಾರಿದೀಪವಾಗುತ್ತದೆ’. ಇಂತಹ ಸಾಮಾಜಿಕ ಕಾರ್ಯಕ್ಕೆ ಸಮಾಜ ಸೇವಕ ರವೀಂದ್ರ ಅವರು ಮೇಲ್ಪಂಕ್ತಿ ಹಾಕಿದ್ದಾರೆ ಎಂದರು. ಶಾಲಾಭಿವೃದ್ಧಿ ಸಮಿತಿಯ ಸಲಹೆಗಾರ ಕೆ.ಎಸ್.ರಾಜಾಚಾರಿ, ರಂಗಭೂಮಿ ಕಲಾವಿದ ಭರಮಣ್ಣ ಬೆಟಗೇರಿ, ಸಮಾಜ ಸೇವಾ ಕಾರ್ಯಕರ್ತ ಖಾಸಿಂ, ಬಸಪ್ಪ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ.ಗೀತಾ ಕೆ.ಟಿ.ಸೌಮ್ಯ, ಬಿ.ಎಸ್.ಅನ್ಸಿಲಾ ರೇಖಾ ಇತರರು ಇದ್ದರು.