ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ: ಉತ್ತಮ ಶಿಕ್ಷಣದಿಂದ ಮಕ್ಕಳಿಗೆ ಉತ್ತಮ ಭವಿಷ್ಯ: ಸೂದನ ರತ್ನಾವತಿ

ಕುಶಾಲನಗರ: ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಪ್ರತಿನಿತ್ಯ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠ ಪ್ರವಚನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಹಿರಿಯ ಅಧಿಕಾರಿಯೂ ಆದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯೆ ಸೂದನ ರತ್ನಾವತಿ ಹೇಳಿದರು.
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನೋಟ್‌ಬುಕ್, ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವತಃ ಲೇಖನ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಾಗಿದೆ. ಸಾರ್ವಜನಿಕವಾಗಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಈ ಶಾಲೆಯಲ್ಲಿ ಮಕ್ಕಳಿಗೆ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ಮೂಲಕ ಕಲಿಕೆಗಾಗಿ ವಿಶೇಷ ಒತ್ತು ನೀಡಲಾಗಿದ್ದು, ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ. ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕವಾಗುವಂತೆ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಕೆಲಸ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂದನ ರತ್ನಾವತಿ ಸಲಹೆ ನೀಡಿದರು.
ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ, ಬಡ ಮಕ್ಕಳ ಬಾಳಿಗೆ ಸಹಾಯಹಸ್ತ ನೀಡುವ ಸಹಾಯ ದಾರಿದೀಪವಾಗುತ್ತದೆ’. ಇದಕ್ಕೆ ಪೂರಕವಾಗಿ ದಾನಿಗಳಾದ ಸೂದನ ರತ್ನಾವತಿ ಅವರು ಕಳೆದ ಕೆಲವು ವರ್ಷಗಳಿಂದ ಬಡ ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ನೀಡುತ್ತಾ ಬಂದಿರುವುದು ಸ್ತುತ್ಯಾರ್ಹವಾದುದು ಎಂದು ಶ್ಲಾಘಿಸಿದರು.
ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡಿದವರು ಸಮಾಜದ ಉನ್ನತ ಹುದ್ದೆ ಹಾಗೂ ವಿವಿಧ ಸ್ತರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ತಮ್ಮನ್ನು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕಳೆದ ಹಲವು ವರ್ಷಗಳಿಂದ ಉಚಿತ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ದಾನಿಗಳಾದ ಸೂದನ ರತ್ನಾವತಿ ಅವರ ಸೇವಾ ಕಾರ್ಯ ಪ್ರಶಂಸನೀಯವಾದುದು. ದಾನಿಗಳು ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೂಡ ಸಾಧ್ಯ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ , ವಿದ್ಯಾರ್ಥಿಗಳು ಇದ್ದರು. ಇದೇ ವೇಳೆ ದಾನಿ ಸೂದನ ರತ್ನಾವತಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿರುವ ಬಿ.ಎನ್.ಪುಷ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.