ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಆರೋಪಿಗಳಿಗೆ ಗಡಿಪಾರು
ಹಾವೇರಿ: ಹಾನಗಲ್ ತಾಲ್ಲೂಕಿನಲ್ಲಿ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಒಂದು ವರ್ಷದ ಅವಧಿಗೆ ಯಾದಗಿರಿ ಜಿಲ್ಲೆಗೆ ಕಳುಹಿಸುವಂತೆ ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶಿಸಿದ್ದಾರೆ.
ಗಡಿಪಾರಾದವರನ್ನು ಅಪ್ತಾಬ್ ಚಂದನಕಟ್ಟಿ, ಮದರ್‌ಸಾಬ್ ಮಂಡಕ್ಕಿ, ಮಹಮ್ಮದ್ ಸಾದಿಕ್ ಅಗಸಿಮಣಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಗುರುತಿಸಲಾಗಿದೆ. ಆರೋಪಿಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು ಮಾಡುವಂತೆ ಕೋರಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನಂತರ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗುವ ಸಂದರ್ಭಗಳಲ್ಲಿ ಮಾತ್ರ ಆರೋಪಿಗಳು ನಿಗದಿತ ಮಾರ್ಗಗಳ ಮೂಲಕ ಹಾವೇರಿ ಜಿಲ್ಲೆಗೆ ಪ್ರವೇಶಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.
ಪ್ರಕರಣದ ಹಿನ್ನೆಲೆ:
2024ರ ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಸಮೀಪ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 19 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ 12 ಮಂದಿ ಆರೋಪಿಗಳು 10 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಉಳಿದ ಏಳು ಮಂದಿಯ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ಮತ್ತೆ ತಿರಸ್ಕರಿಸಿತ್ತು.
2025ರ ಮೇ 20ರಂದು ಈ ಏಳು ಮಂದಿ ಜಾಮೀನಿನಲ್ಲಿ ಬಿಡುಗಡೆಯಾದ ವೇಳೆ, ಕಾರಾಗೃಹದಿಂದ ತೆರೆದ ಜೀಪಿನಲ್ಲಿ ಕೇಕೆ ಹಾಕುತ್ತ ಸಾಗಿದ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಸಂಬಂಧ ಮತ್ತೊಂದು ಪ್ರಕರಣವೂ ದಾಖಲಾಗಿತ್ತು. ಅಲ್ಲದೆ, ಸಾಕ್ಷಿದಾರರಿಗೆ ಜೀವ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿತ್ತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಇದೀಗ ಆರೋಪಿಗಳಿಗೆ ಗಡಿಪಾರು ಶಿಕ್ಷೆ ವಿಧಿಸಲಾಗಿದೆ.
What's Your Reaction?
Like
2
Dislike
0
Love
0
Funny
0
Angry
2
Sad
1
Wow
0
