ಆರೋಗ್ಯ ಇಲಾಖೆ ಕಾರ್ಯಕ್ರಮದ ತ್ರೈಮಾಸಿಕ ವರದಿ ಪರಿಶೀಲನೆ ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ: ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್

ಆರೋಗ್ಯ ಇಲಾಖೆ ಕಾರ್ಯಕ್ರಮದ ತ್ರೈಮಾಸಿಕ ವರದಿ ಪರಿಶೀಲನೆ   ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ: ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್

ಮಡಿಕೇರಿ ಜೂ.24:-ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಾದ್ಯಂತ ವಿಶೇಷ ಕೋಪ್ಟಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮ ರೂಪಿಸುವಂತೆ ನಿರ್ದೇಶನ ನೀಡಿದರು. 

‘ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ಶಿಬಿರವನ್ನು ಪ್ರತೀ ತಿಂಗಳು ಏರ್ಪಡಿಸುವಂತಾಗಬೇಕು. ಧೂಮಪಾನ ಮಾಡುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.’ 

ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. 

ಶಾಲಾ-ಕಾಲೇಜುಗಳಲ್ಲಿ ರ್ಯಾಲಿ, ಜಾಥಾ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲು ಕ್ರಮವಹಿಸಲಾಗಿದೆ. ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ, ಹಾಗೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೀಗೆ ವಿವಿಧ ಇಲಾಖೆ ಜೊತೆ ಸಮನ್ವಯತೆ ಸಾಧಿಸಿ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮ ಅಧಿಕಾರಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವಂತಿಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ದಂಡ ವಿಧಿಸಲಾಗುತ್ತದೆ ಎಂದರು. 

ಸೆಕ್ಷನ್ 4 ಪ್ರಕಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತಿತರ ಪ್ರದೇಶಗಳಲ್ಲಿ ತಂಬಾಕು ನಿಷೇಧಿತ ಪ್ರದೇಶವೆಂದು ನಾಮಫಲಕ ಅಳವಡಿಸಬೇಕು ಎಂದು ತಿಳಿಸಿದರು.

21 ವರ್ಷದೊಳಗಿನ ವ್ಯಕ್ತಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ-ಕಾಲೇಜು ವ್ಯಾಪ್ತಿಯ 100 ಮೀ. ಅಂತರದಲ್ಲಿ ಸಿಗರೇಟ್ ಅಥವಾ ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಉಲ್ಲಂಘನೆ ಮಾಡಿದ್ದಲ್ಲಿ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದರು. 

ಕೋಟ್ಪಾ ಕಾಯ್ದೆಯಡಿ ಜಿಲ್ಲೆಯ ಹಲವು ಕಡೆಗಳಲ್ಲಿ ಏಪ್ರಿಲ್ –ಮೇ ತಿಂಗಳಲ್ಲಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಸೆಕ್ಷನ್ 4 ರ ಪ್ರಕಾರ 272 ಪ್ರಕರಣ ದಾಖಲಾಗಿದ್ದು, 45,700 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದರು. 

ಅತಿಸಾರ ಭೇದಿ ನಿಯಂತ್ರಣ ಕ್ರಮ: ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಅತಿಸಾರ ಭೇದಿ ತಡೆಯುವಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜುಲೈ, 31 ರವರೆಗೂ ಈ ಬಗ್ಗೆ ಜಾಗೃತಿ ನಡೆಯಲಿದೆ ಎಂದರು. 

ಶಿಶು ಮರಣ ತಡೆಯುವುದು ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ 5 ವರ್ಷದೊಳಗಿನ ಮಕ್ಕಳು ಅತೀಸಾರ ರೋಗದಿಂದ ಮರಣ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆಗಳು ಹೆಚ್ಚಿನ ಮಾಹಿತಿ ನೀಡುವಲ್ಲಿ ಶ್ರಮಿಸಲಾಗಿದೆ ಎಂದರು. 

ರಾಷ್ಟ್ರದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಓಆರ್‍ಎಸ್ ಮತ್ತು ಜಿಂಕ್ ಹೆಚ್ಚು ಬಳಕೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದರು. 

ಮಾಹಿತಿ ಶಿಕ್ಷಣ ಮತ್ತು ಸಂವಹನ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಜಲಜೀವನ್ ಮಿಷನ್, ಪಂಚಾಯತ್ ರಾಜ್, ಆಹಾರ, ಶಿಕ್ಷಣ, ಹೀಗೆ ವಿವಿಧ ಇಲಾಖೆಗಳ ಜೊತೆ ಸಮನ್ವಯತೆ ಸಾಧಿಸಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. 

ಸ್ವಚ್ಛತೆ ಮತ್ತು ಆರೋಗ್ಯ ಶಿಕ್ಷಣ ನೀಡುವುದು, ನಗರದ ಪ್ರದೇಶದಲ್ಲಿ ಸಂಚಾರಿ ಆರೋಗ್ಯ ತಂಡ ರಚಿಸುವುದು ಮತ್ತಿತರ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಹೇಳಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ, ಮಲೇರಿಯಾ, ಮತ್ತಿತರ ರೋಗಗಳು ಹರಡದಂತೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಅವರು ತಿಳಿಸಿದರು. 

ಜಿಲ್ಲೆಯಲ್ಲಿ ಜನವರಿಯಿಂದ ಮೇ ವರೆಗೆ ಟೈಪಾಯಿಡ್ ಜ್ವರದಿಂದ 101 ಪ್ರಕರಣ, ನಾಯಿ ಕಡಿತದಿಂದ 2,961, ಹಾವು ಕಡಿತದಿಂದ 101, ಭೇದಿಯಿಂದ 942, ಡೆಂಗ್ಯೂವಿನಿಂದ 16, ಇಲಿ ಜ್ವರದಿಂದ 23, ತೀವ್ರ ಉಸಿರಾಟ 8, ಶ್ವಾಸಕೋಶ ಸಂಬಂಧಿಸಿದ ಕಾಯಿಲೆಗೆ 2513 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. 

ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಧುಸೂದನ್, ಡಾ.ಶ್ರೀನಿವಾಸ್, ಡಾ.ಸನತ್ ಕುಮಾರ್, ಡಾ.ಆನಂದ್, ಡಾ.ಯತಿರಾಜು, ಡಾ.ಇಂದುದರ, ಡಾ.ಅನಿಲ್ ದವನ್ ಅವರು ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದರು.