ನೈಸ್ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌: ಇಬ್ಬರು ಮಹಿಳಾ ಕಾರ್ಮಿಕರು ಮೃತ್ಯು

ನೈಸ್ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌: ಇಬ್ಬರು ಮಹಿಳಾ ಕಾರ್ಮಿಕರು ಮೃತ್ಯು

ಬೆಂಗಳೂರು, ಡಿ.13: ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಹಿಟ್‌ ಅಂಡ್‌ ರನ್‌ ಅಪಘಾತದಲ್ಲಿ ಇಬ್ಬರು ಮಹಿಳಾ ದಿನಗೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ರಸ್ತೆ ಬದಿಯಲ್ಲಿ ಹುಲ್ಲು ತೆರವು ಕಾರ್ಯದಲ್ಲಿ ತೊಡಗಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ಮೃತರನ್ನು ಯಾದಗಿರಿ ಜಿಲ್ಲೆಯ ಮೂಲದ ರಂಗಮ್ಮ (45) ಮತ್ತು ಚೌಡಮ್ಮ (55) ಎಂದು ಗುರುತಿಸಲಾಗಿದೆ. ಸಂಜೆ ಸುಮಾರು 5.54ರ ವೇಳೆಗೆ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾಹಿತಿ ದೊರಕುತ್ತಿದ್ದಂತೆಯೇ ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹಗಳನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.