State News

ಪತ್ನಿಯನ್ನು ಹತ್ಯೆ ಮಾಡಿ ಪತಿ ಮಾಡಿದ್ದೇನು ಗೊತ್ತಾ!

admincoorgdaily

Photo credit: TV09

ಬೆಂಗಳೂರು, ಡಿ. 23: ಪತ್ನಿಯನ್ನು ಹತ್ಯೆ ಮಾಡಿ ಅದನ್ನು ಅಪಘಾತದಂತೆ ಬಿಂಬಿಸಲು ಯತ್ನಿಸಿದ ಪತಿ ಕೆಲವೇ ಗಂಟೆಗಳಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಯಲಹಂಕ ಸಮೀಪದ ಬೊಮ್ಮಸಂದ್ರ ಪ್ರದೇಶದ ನಿವಾಸಿ ಅನಂತ್ (64) ತನ್ನ ಪತ್ನಿ ಗಾಯತ್ರಿ (50) ಅವರನ್ನು ಸೈಟ್ ನೋಡಲು ಕರೆದುಕೊಂಡು ಹೋಗಿದ್ದ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಬಳಿ ಸೈಟ್‌ನಲ್ಲಿ ಪತ್ನಿಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ಬಳಿಕ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ಬಿಂಬಿಸಲು ಆರೋಪಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಗಾಯಗಳ ಸ್ವರೂಪವನ್ನು ಪರಿಶೀಲಿಸಿದ ಚಿಕ್ಕಜಾಲ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಗೆ ಅನುಮಾನ ಮೂಡಿದ್ದು, ಇದು ಅಪಘಾತವಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಗಲೂರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಾಥಮಿಕ ತನಿಖೆಯ ನಂತರ ಇದು ಕೊಲೆ ಪ್ರಕರಣ ಎಂದು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪತ್ನಿ ಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.