ಹೈದರಾಬಾದ್-ಬೆಂಗಳೂರು ಬಸ್ ದುರಂತ: ಬೈಕ್‌ಗೆ ಡಿಕ್ಕಿ, ಬಸ್ ಬೆಂಕಿಗಾಹುತಿ; 11 ಮಂದಿ ಸಜೀವ ದಹನ
ಕರ್ನೂಲ್, ಅ. 24: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಬೆಂಕಿಗಾಹುತಿಯಾಗಿ ಕನಿಷ್ಠ 11 ಮಂದಿ ಸಜೀವ ದಹನಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಬೆಳಗಿನ ಸುಮಾರು 3.30ರ ಸುಮಾರಿಗೆ ವೇಗವಾಗಿ ಬರುತ್ತಿದ್ದ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ಫೋಟ ಸಂಭವಿಸಿತು. ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ತಗುಲಿ ತೀವ್ರವಾಗಿ ಹರಡಿದ್ದು, ಇಡೀ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಮೊದಲು ಬಸ್ನ ಮುಂಭಾಗಕ್ಕೆ ಬೆಂಕಿ ತಗುಲಿತು. ಕ್ಷಣಾರ್ಧದಲ್ಲಿ ಅದು ಇಡೀ ಹರಡಿತು.
ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಅವರಲ್ಲಿ 18 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ 11 ಮಂದಿ ಪ್ರಯಾಣಿಕರು ಬೆಂಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಗುರುತಿಸಲು ಅಸಾಧ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಆ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಸರಿಯಾಗಿ ಕಾಣದೆ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಪ್ರಾಥಮಿಕ ಶಂಕಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರೂ, ಅನೇಕ ಜೀವಗಳು ಬೆಂಕಿಗೆ ಆಹುತಿಯಾಗಿದ್ದವು. ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದುಃಖ ವ್ಯಕ್ತಪಡಿಸಿದ್ದಾರೆ. “ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಸಂಭವಿಸಿದ ಈ ದುರಂತದ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಗಾಯಾಳುಗಳಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು,” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.