ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ; ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಅಭಿಪ್ರಾಯ

ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ;  ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಅಭಿಪ್ರಾಯ

ಮಡಿಕೇರಿ ಜೂ.5:-ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು, ವಕೀಲರ ಸಂಘ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ "ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದೊಂದಿಗೆ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಕವಿ ಪಂಜೆ ಮಂಗೇಶರಾಯರು ರಚಿಸಿರುವ ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ... ಎಂಬ ಹಾಡನ್ನು ಹಾಡಿದರು. ಕೊಡಗು ಪ್ರಾಕೃತಿಕವಾಗಿ ಸೌಂದರ್ಯವನ್ನು ಹೊಂದಿದ್ದು, ಅದನ್ನು ಉಳಿಸಿಕೊಳ್ಳುವಂತಾಗಬೇಕು. ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರತಿ ದಿನ ಪರಿಸರ ಕಾಳಜಿ ತೋರಬೇಕು. ನಮ್ಮ ದಿನನಿತ್ಯದ ಜೀವನದಲ್ಲಿ ಪರಿಸರ ಸಂರಕ್ಷಣೆಗಾಗಿ ಸಣ್ಣಪುಟ್ಟ ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕು ಎಂದು ನ್ಯಾಯಧೀಶರು ಹೇಳಿದರು.

ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಕೇವಲ ಒಂದು ದಿನ ಗಿಡ ನೆಟ್ಟು ಆಮೇಲೆ ಅದನ್ನು ಮರೆತುಬಿಡುವ ಬದಲು, ಆ ಗಿಡಕ್ಕೆ ವಿದ್ಯಾರ್ಥಿಗಳು ತಮ್ಮ ಹೆಸರನ್ನಿಟ್ಟು ನಿರಂತರ ಪೋಷಣೆ ಮಾಡಿ, ಪರಿಸರಕ್ಕೆ ನಿಜವಾದ ಕೊಡುಗೆ ನೀಡಬೇಕು. ಆ ಶಾಲೆ ಬಿಟ್ಟ ನಂತರವೂ ಸಂತೃಪ್ತಿ ಭಾವನೆ ಬೆಳೆಯುತ್ತದೆ ಎಂದರು.

ನಾವು ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳ ಬಟ್ಟೆ ವಸ್ತುಗಳನ್ನು ಬಳಸುವಂತಾಗಬೇಕು ಎಂದರು.

ಪ್ರಕೃತಿಯಲ್ಲಿ ಯಾವುದೇ ಸ್ವಾರ್ಥವಿಲ್ಲದೆ ಎಲ್ಲ ಉಚಿತವಾಗಿ ದೊರೆಯುತ್ತದೆ. ಆದ್ದರಿಂದ ಮನುಷ್ಯರು ಸ್ವಾರ್ಥ ಭಾವನೆಯನ್ನು ಬಿಟ್ಟು "ಸರ್ವೇ ಜನೋ ಸುಖಿನೋ ಭವಂತು" ಎಂಬ ಮಂತ್ರದೊಂದಿಗೆ ಕೆಲಸ ಮಾಡಬೇಕು. ನಮ್ಮ ಊರಿನೊಂದಿಗೆ ಪಕ್ಕದ ಊರಿನ ಮೇಲೂ ಅಭಿಮಾನ ಹೊಂದಿರಬೇಕು. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಕಸದ ನಿರ್ವಹಣೆ ಮನೆಯಿಂದಲೇ ಆರಂಭವಾಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಬೇರ್ಪಡಿಸುವ ಮೂಲಕ ಮಾಲಿನ್ಯವನ್ನು ತಡೆಯಬೇಕು. ಪರಿಸರ ಕಾಳಜಿ ದಿನ ನಿತ್ಯದ ಕಾಯಕ ಆಗಬೇಕು. ಮನೆಯ ಅಂಗಳದಲ್ಲಿ ಅಥವಾ ಲಭ್ಯವಿರುವ ಜಾಗದಲ್ಲಿ ಜೌಷಧೀಯ ಸಸ್ಯಗಳನ್ನು ಬೆಳೆಸುವುದರ ಮೂಲಕ ಆರೋಗ್ಯ ಮತ್ತು ಪರಸರ ಎರಡಕ್ಕೂ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಈಗಾಗಲೇ ನೀರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ನಾಶದಿಂದ ಪ್ರಾಣಿಗಳು ನಾಡಿಗೆ ದಾವಿಸುತ್ತಿದೆ. ಆದ್ದರಿಂದ ಹತ್ತಿರದ ಸ್ಥಳಗಳಿಗೆ ವಾಹನ ಬಿಟ್ಟು ನಡೆದುಕೊಂಡು ಹೋಗುವುದು ಹಾಗೂ ಬೈಸಿಕಲ್ ಬಳಕೆ ಮಾಡುವ ಮೂಲಕ ಮಾಲಿನ್ಯ ತಡೆಯಬೇಕಿದೆ ಎಂದು ಶುಭ ಅವರು ವಿವರಿಸಿದರು. ಪರಿಸರ ಸಂರಕ್ಷಣೆಗೆ ಎಲ್ಲರೂ ಪಣತೊಡಬೇಕು ಎಂದು ಶುಭ ಅವರು ಕರೆ ನೀಡಿದರು. 

ಇದಕ್ಕೂ ಮೊದಲು ಅತಿಥಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಗಿಡನೆಟ್ಟರು. ಪ್ರತಿಜ್ಞಾ ವಿಧಿ ಬೋಧನೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ.ಮಹೇಶ್ವರಿ ಕುಮಾರಿ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ, ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿವರಿಸಿದರು.

ಜಾಥಾ: ನಗರದ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ "ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದೊಂದಿಗೆ ಪರಿಸರ ಜಾಗೃತಿ ಜಾಥಾ ನಡೆಯಿತು. ಈ ಸಂದರ್ಭ ಜಾಥಾಕ್ಕೆ ಜಾಲನೆ ನೀಡಿ ಮಾತನಾಡಿದ ಮಡಿಕೇರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಧೀಶರಾದ ಸಿ.ಕೆ.ಬಸವರಾಜು ಅವರು, "ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಮತ್ತು ಮಣ್ಣನ್ನು ಉಳಿಸಬೇಕಾದರೆ ಇಂದಿನಿಂದಲೇ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವುದು ಇಂದಿನ ತುರ್ತು ಅಗತ್ಯವಾಗಿದೆ," ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಆರ್.ಮಂಜುನಾಥ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಜಯನ್, ಆರ್‍ಎಫ್‍ಒ ಶಿವಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ವಿದ್ಯಾರ್ಥಿಗಳು ಪ್ರಾರ್ಥಿಸಿ ನಾಡಗೀತೆ ಹಾಡಿದರು, ಸಾಹಿತಿ ಉ.ರಾ.ನಾಗೇಶ್ ನಿರೂಪಿಸಿದರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ.ಮಹೇಶ್ವರಿ ಕುಮಾರಿ ಸಿಂಗ್ ಸ್ವಾಗತಿಸಿದರು, ಯೋಜನಾ ಸಹಾಯಕರಾದ ಕೆ.ಎ.ಅಸ್ಟಿನ್ ವಂದಿಸಿದರು. 

ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.