ಕುಶಾಲನಗರ : ಡಿ.17 ರಂದು ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಕುಶಾಲನಗರ : ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಹಳೆ ಪಿಂಚಣಿ ಯೋಜನೆ ಜಾರಿ,ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಸೇರಿದಂತೆ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 17 ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ಕಾರ್ಯದರ್ಶಿ ಎಸ್. ನಾಗರಾಜ್ ತಿಳಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಹಳೆಯ ಪಿಂಚಣಿ ಅತಿ ಶೀಘ್ರವಾಗಿ ಜಾರಿಗೆ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ರಾಜ್ಯ ಸಂಘ ಈಗಾಗಲೇ ತೀರ್ಮಾನಿಸಿದ್ದು ಸಂಘಟನೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಅನುದಾನಿತ ನೌಕರರ ಮತ್ತು ಸಂಸ್ಥೆಗಳ ಉಳಿವಿಗಾಗಿ ಹೋರಾಟ ಅನಿವಾರ್ಯ ಆಗಿದೆ. ಆದ್ದರಿಂದ ಕೊಡಗು ಜಿಲ್ಲಾ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅನುದಾನಿತ ಶಾಲಾ ಕಾಲೇಜುಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ನಾಗರಾಜ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
