ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ
admincoorgdaily
ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆದಿವಾಸಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾ ನಿರತರು ಜಿಲ್ಲಾಡಳಿತ ಹಾಗೂ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಐಟಿಯು ಅಧ್ಯಕ್ಷ ಪಿ.ಆರ್.ಭರತ್, ಜಿಲ್ಲೆಯಲ್ಲಿ ಸಾವಿರಾರು ಆದಿವಾಸಿ ಕುಟುಂಬಗಳಾದ ಜೇನುಕುರುಬ, ಸೋಲಿಗ, ಎರವ, ಪಣಿಎರವ, ಕಾಡು ಕುರುಬರು, ಕೊರಗ, ನಾಯಕ ಸೇರಿದಂತೆ ಇನ್ನಿತರರು ಜಿಲ್ಲೆಯಲ್ಲಿ ಮೂಲ ನಿವಾಸಿಗಳಾಗಿದ್ದು, ಜಿಲ್ಲೆಯಲ್ಲಿಯೇ ಹುಟ್ಟಿ ಬೆಳೆದ ಆದಿವಾಸಿ ಕುಟುಂಬಗಳು ಸ್ವಂತ ವಾಸಕ್ಕೆ ಮನೆಯಿಲ್ಲದ ಕಾರಣಕಾಗಿ ಜೀವನ ಪರ್ಯಂತ ಬಾಡಿಗೆ ಮನೆ, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಕುಟುಂಬಸ್ಥರ ಆಶ್ರಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೀತ ವ್ಯವಸ್ಥೆಯಲ್ಲಿ ಬದುಕುವ ದುಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ನಿಗಧಿಪಡಿಸಿದ ಕನಿಷ್ಠ ವೇತನ ಇನ್ನಿತರ ಮೂಲ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೆ ಅತ್ಯಂತ ಕಡಿಮೆ ವೇತನದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ದುಡಿದು ತಮ್ಮ ದೈನಂದಿನ ಜೀವನಕ್ಕೆ ಬೇಕಾದ ಆಹಾರ ಪದಾರ್ಥಗಳು, ಬಟ್ಟೆ-ಬರೆಗಳು, ಮಕ್ಕಳ ಶಿಕ್ಷಣ ಮತ್ತು ಆರೋಗ್ಯ ಪಡೆದುಕೊಳ್ಳಲು ಸಾಧ್ಯವಾಗದೆ ಆದಿವಾಸಿಗಳು ಅನಾರೋಗ್ಯ ಪೀಡಿತರಾಗಿ ಬಹಳ ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಮುಖ್ಯ ಕಾರಣವೇ ಸ್ವತಂತ್ರವಾದ ಬದುಕು ನಡೆಸಲು ವಾಸಕ್ಕೆ ತನ್ನದೇ ಆದ ಒಂದು ಮನೆಯಿಲ್ಲದೆ ಇರುವುದು. ಆದ್ದರಿಂದ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಾಣ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಆದಿವಾಸಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.