ಮಡಿಕೇರಿ:ಪೊಲೀಸ್ ಮೈತ್ರಿ ಭವನದ ಬಳಿ 5.30 ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಚಾಲನೆ
ಮಡಿಕೇರಿ ಜ.26:-ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುವ ಪೊಲೀಸರಿಗೆ ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದ ಬಳಿ ಸುಮಾರು 5.30 ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವರು ಮಾತನಾಡಿದರು.
ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಾಗಿ ಬದುಕುವಲ್ಲಿ ಪೊಲೀಸರ ಶ್ರಮ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಪೊಲೀಸ್ ಇಲಾಖೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ ಎಂದರು. ಈ ಹಿಂದೆ ಎಸ್ ಪಿ ಆಗಿದ್ದವರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಅದೇ ರೀತಿ ತಾವು ಸಹ ಜನಪರವಾಗಿ ಕೆಲಸ ಮಾಡಬೇಕು. ಶಾಂತಿ, ಸುವ್ಯವಸ್ಥೆಗೆ ಒತ್ತು ನೀಡಬೇಕು ಎಂದು ಸಚಿವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯ ನಿಷ್ಠೆಯನ್ನು ಮೆಚ್ಚಬೇಕಿದೆ ಎಂದರು. ಸಮಾಜದ ರಕ್ಷಣೆಗೆ ಪೊಲೀಸರು ಇದ್ದರೆ, ಪೊಲೀಸರ ರಕ್ಷಣೆಗೆ ಸಮಾಜ ಇರಲಿದೆ ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು ಪೊಲೀಸರಿಗೆ ಮಡಿಕೇರಿ ನಗರದಲ್ಲಿ ಇನ್ನೂ 50 ವಸತಿ ಗೃಹ ಬೇಕಿದ್ದು, ಆ ನಿಟ್ಟಿನಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಗಮನ ಸೆಳೆದು ವಸತಿ ಗೃಹ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಜತೆಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು. ಸುಂಟಿಕೊಪ್ಪದಲ್ಲಿ 2.50 ಕೋಟಿ ರೂ ವೆಚ್ಚದಲ್ಲಿ ಪೊಲೀಸರ ವಸತಿ ಗೃಹ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಗೃಹ ಸಚಿವರನ್ನು ಆಹ್ವಾನಿಸಲಾಗುವುದು ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಅಪ್ಪಣ್ಣ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸೂರಜ್, ಐ.ಪಿ.ಮೇದಪ್ಪ, ಲಕ್ಷ್ಮಿಕಾಂತ್, ಚಂದ್ರಶೇಖರ, ಪೊಲೀಸ್ ಅಧಿಕಾರಿಗಳು ಇದ್ದರು.