ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಹಲವು ಕಾಮಗಾರಿ ಶೀಘ್ರ ಪೂರ್ಣಗೊಳಿಸಿ;ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
admincoorgdaily

ಮಡಿಕೇರಿ ಆ.10:-ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ನಗರದ ಕರ್ನಾಟಕ ಸುವರ್ಣ ಸಮುಚ್ಚಯ ಭವನ, ಗಾಂಧಿ ಸ್ಮಾರಕ ಉದ್ಯನವನ ಹಾಗೂ ಕುಶಾಲನಗರದ ಕಲಾಭವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕುಶಾಲನಗರದ ಕಲಾಭವನದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಧ್ವನಿವರ್ಧಕ, ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿಯಾಗಿ 10 ಲಕ್ಷ ರೂ. ಬೇಕಾಗಿದ್ದು, ಇದನ್ನು ಬಿಡುಗಡೆಗೊಳಿಸಲಾಗುವುದು. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಕೆಆರ್‍ಐಡಿಎಲ್ ಎಂಜಿನಿಯರ್‍ಗೆ ಸೂಚಿಸಿದರು.
ಕೆಆರ್‍ಐಡಿಎಲ್ ಎಂಜಿನಿಯರ್ ರಘುನಂದನ್ ಅವರು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಸುವರ್ಣ ಸಮುಚ್ಚಯ ಭವನಕ್ಕೆ ಇನ್ನೂ ಒಂದು ಕೋಟಿಗೂ ಹೆಚ್ಚು ಹಣ ಬೇಕಿದ್ದು, ಒಂದುವರೆ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಪ್ರಭು ಅವರು ಮಾಹಿತಿ ನೀಡಿದರು.
ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಜಂಟಿ ನಿರ್ದೇಶಕರಾದ ನಿರ್ಮಲಾ ಮಠಪತಿ ಅವರು ಮಾತನಾಡಿ, ಕರ್ನಾಟಕ ಸುವರ್ಣ ಸಮುಚ್ಚಯ ಭವನ ಬಾಕಿ ಇರುವ ಕಾಮಗಾರಿಗೆ 82 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ. ಉಳಿದಂತೆ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಕೋರಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದವರು 1.50 ಕೋಟಿ ವಾಪಸ್ಸು ಪಡೆದಿದ್ದು, ಈ ಅನುದಾನ ಬಿಡುಗಡೆಗೆ ಕೋರುವಂತಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ಕರ್ನಾಟಕ ಸುವರ್ಣ ಸಮುಚ್ಚಯ ಭವನ ಕಾಮಗಾರಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಹೆಚ್ಚಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ನಗರದ ಗಾಂಧಿ ಮೈದಾನದ ಬಳಿ ನಿರ್ಮಿಸಲಾಗುತ್ತಿರುವ ಗಾಂಧಿ ಸ್ಮಾರಕ ಉದ್ಯನವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು.
ಆ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಕೆಆರ್‍ಐಡಿಎಲ್ ಎಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮೊದಲ ಹಂತದಲ್ಲಿ 50 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಹಂತದಲ್ಲಿ 25 ಲಕ್ಷ ರೂ. ಬಿಡುಗಡೆಯಾಗಿದೆ. ಆ ದಿಸೆಯಲ್ಲಿ ಮುಂದುವರೆದ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಕೆಆರ್‍ಐಡಿಎಲ್ ಎಂಜಿನಿಯರ್ ರಘುನಂದನ್ ಅವರು, ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು. ಬಳಿಕ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಎಂಜಿನಿಯರ್‍ಗಳು ಎಲ್ಲವನ್ನು ಒಂದೇ ಅಳತೆಯಲ್ಲಿ ಅಳೆಯಬಾರದು, ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಅಭಿಮಾನ ಇರಬೇಕು. ಕನ್ನಡ ಭಾಷೆ, ನಾಡು, ನುಡಿ, ಸಾಹಿತ್ಯ-ಸಂಸ್ಕøತಿ ಕಲೆಗಳ ಬಗ್ಗೆ ಗೌರವ ಇರಬೇಕು. ಆ ನಿಟ್ಟಿನಲ್ಲಿ ಆತ್ಮತೃಪ್ತಿಯಿಂದ ಕೆಲಸ ಮಾಡುವಂತೆ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಅವರು ಸೂಚ್ಯವಾಗಿ ಎಚ್ಚರಿಸಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಅವರು ಹಲವು ಮಾಹಿತಿ ನೀಡಿದರು.