ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅ*ತ್ಯಾ*ಚಾರ; ಸಂತ್ರಸ್ತೆಯ ಸ್ಥಿತಿ ಗಂಭೀರ

Oct 12, 2025 - 10:13
 0  1.2k
ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅ*ತ್ಯಾ*ಚಾರ; ಸಂತ್ರಸ್ತೆಯ ಸ್ಥಿತಿ ಗಂಭೀರ
Photo credit: INDIA TODAY

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿಯಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದೆ.

ಐಕ್ಯೂ ಸಿಟಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂತ್ರಸ್ತೆ, ಒಡಿಶಾದ ಜಲೇಶ್ವರ್ ಮೂಲದ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿ ಸುಮಾರು 8.30ರ ಸುಮಾರಿಗೆ ಆಕೆ ತನ್ನ ಸ್ನೇಹಿತನೊಂದಿಗೆ ಹೊರಗೆ ತೆರಳಿದ್ದಾಗ, ಕೆಲ ಯುವಕರು ಅವರನ್ನು ಕಾಲೇಜಿನ ಗೇಟ್‌ ಬಳಿ ತಡೆದು, ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

 ಘಟನೆಯ ವೇಳೆ ಯುವತಿಯ ಸ್ನೇಹಿತ ಸ್ಥಳದಿಂದ ಪರಾರಿಯಾಗಿದ್ದು, ಆತನೇ ಘಟನೆಯಲ್ಲಿ ಭಾಗಿಯಾಗಿರಬಹುದೆಂಬ ಶಂಕೆ ಕುಟುಂಬದಿಂದ ವ್ಯಕ್ತವಾಗಿದೆ. “ನನ್ನ ಮಗಳ ಗೆಳೆಯನೇ ಆಕೆಯನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ,” ಎಂದು ಸಂತ್ರಸ್ತೆಯ ತಂದೆ ಪೊಲೀಸರಿಗೆ ನೀಡಿದ ದೂರುದಲ್ಲಿ ತಿಳಿಸಿದ್ದಾರೆ. ದುಷ್ಕರ್ಮಿಗಳು ಯುವತಿಯ ಮೊಬೈಲ್ ಫೋನ್ ಹಾಗೂ ₹5,000 ನಗದು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದೂ ಅವರು ದೂರಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ತಕ್ಷಣ ದುರ್ಗಾಪುರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿತಿ ಆತಂಕಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ವ್ಯಾಪಕ ತನಿಖೆ ಆರಂಭಿಸಿದ್ದು, ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ. ಯುವತಿಯ ಪ್ರಾಥಮಿಕ ಹೇಳಿಕೆಯನ್ನೂ ಪೊಲೀಸರು ದಾಖಲಿಸಿದ್ದಾರೆ.

ಮಹಿಳೆಯರ ಮೇಲಿನ ಹಿಂಸೆ ಪ್ರಕರಣಗಳು ಪಶ್ಚಿಮ ಬಂಗಾಳದಲ್ಲಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಟೀಕೆಗೆ ಗುರಿಯಾಗಿದೆ. ಇದಕ್ಕೂ ಮುನ್ನ ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ, ಮತ್ತು ಕಸ್ಬಾದ ಸೌತ್ ಕಲ್ಕತ್ತಾ ಲಾ ಕಾಲೇಜಿನ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿತ್ತು.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 2
Sad Sad 7
Wow Wow 0