ಸಾಲ ವಸೂಲಿ ವೇಳೆ ಅವಾಚ್ಯವಾಗಿ ನಿಂದಿಸಿದ ಸಂಬಂಧಿಯ ಕೊಲೆ

Dec 31, 2025 - 23:05
 0  671
ಸಾಲ ವಸೂಲಿ ವೇಳೆ ಅವಾಚ್ಯವಾಗಿ ನಿಂದಿಸಿದ ಸಂಬಂಧಿಯ ಕೊಲೆ
ಸಾಂದರ್ಭಿಕ ಚಿತ್ರ

ಚಾಮರಾಜನಗರ, ಡಿ.31: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚೆನ್ನಿಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಉಮೇಶ್ ಎಂದು ಗುರುತಿಸಲಾಗಿದೆ. ಆರೋಪಿತ ಸ್ವಾಮಿಗೌಡ ಮೃತನ ಸಂಬಂಧಿಯಾಗಿದ್ದು, ಉಮೇಶ್ ಸ್ವಾಮಿಗೌಡನಿಗೆ ಸಾಲ ನೀಡಿದ್ದನು. ಸಾಲ ವಸೂಲಿ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ಸ್ವಾಮಿಗೌಡ ಉಮೇಶ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆ ಮತ್ತು ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ನಂತರ ಕತ್ತು ಕೊಯ್ದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಉಮೇಶ್‌ನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿತ ಸ್ವಾಮಿಗೌಡನನ್ನು ಬಂಧಿಸಲಾಗಿದೆ. ಕೊಲೆಗೆ ಪ್ರಚೋದನೆ ನೀಡಿದ ಎನ್ನಲಾದ ಮತ್ತೊಬ್ಬ ವ್ಯಕ್ತಿಯ ಪಾತ್ರದ ಕುರಿತು ತನಿಖೆ ಮುಂದುವರಿದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ದೇವಸ್ಥಾನ ಸಂಬಂಧಿತ ವಿಚಾರಗಳು ಹಾಗೂ ವೈಯಕ್ತಿಕ ದ್ವೇಷವೂ ಈ ಘಟನೆಯ ಹಿನ್ನೆಲೆಯಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ನಡೆಸಿ, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0