ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ
admincoorgdaily

ಮಡಿಕೇರಿ ಆ.29: “ಶಿಸ್ತುಬದ್ಧ ಜೀವನವು ಸಾಧನೆಯ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು” ಎಂದು 19 ಸಿ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಅವರು ಕರೆ ನೀಡಿದ್ದಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡದ ಮನೋಭಾವ, ನಾಯಕತ್ವ ಗುಣ ಹಾಗೂ ಸಹಕಾರದ ಮನೋಭಾವವನ್ನು ಬೆಳೆಸುವುದರ ಜೊತೆಗೆ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ್ ಬಿ. ಮಾತನಾಡಿ, “ಭಾರತವನ್ನು ಶಕ್ತಿಶಾಲಿ ಹಾಗೂ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದರು. ಆರೋಗ್ಯವಂತ ಯುವಜನತೆಯೇ ದೇಶದ ಭವಿಷ್ಯವನ್ನು ಸಮರ್ಥವಾಗಿ ರೂಪಿಸಬಲ್ಲದು. ಕ್ರೀಡೆಯು ದೈಹಿಕ ಕ್ಷಮತೆಯ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ, ಸಮಯಪಾಲನೆ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ದೈನಂದಿನ ಜೀವನದಲ್ಲಿ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸನ್, ದೈಹಿಕ ಶಿಕ್ಷಣ ವಿಭಾಗದ ರಮೇಶ್ ಪಿ.ಸಿ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ತಿಪ್ಪೇಸ್ವಾಮಿ.ಇ. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಗಣ್ಯರು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ, ಕೌಶಲ್ಯ ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದರು.
ಗಣ್ಯರು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಪ್ರಥಮ ಬಿ.ಎ. ವಿದ್ಯಾರ್ಥಿನಿ ಪೂವಮ್ಮ ಅವರು ಮೇಜರ್ ಧ್ಯಾನ್ ಚಂದ್ ಅವರ ಜೀವನ, ಕ್ರೀಡಾ ಸಾಧನೆಗಳು ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ 3ನೇ ಬಿ.ಕಾಂ. ವಿದ್ಯಾರ್ಥಿನಿ ಚೊಂದಮ್ಮ ಪ್ರಾರ್ಥನಾ ಗೀತೆ ಹಾಡಿದರು. ಬಿ.ಕಾಂ. ವಿದ್ಯಾರ್ಥಿನಿ ಅಶ್ಮಿಯಾ ಸ್ವಾಗತ ಭಾಷಣ ಮಾಡಿದರು. 2ನೇ ಬಿ.ಕಾಂ. ವಿದ್ಯಾರ್ಥಿನಿ ಅನೂಷಾ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು. 2ನೇ ಬಿ.ಕಾಂ. ವಿದ್ಯಾರ್ಥಿನಿ ಸಾವಿತ್ರಿ ವಂದಿಸಿದರು.
ವಿದ್ಯಾರ್ಥಿಗಳಲ್ಲಿ ಕ್ರೀಡೆ, ದೈಹಿಕ ಕ್ಷಮತೆ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕ್ರೀಡೆಯ ಮಹತ್ವ ಹಾಗೂ ಅದರ ಸ್ಫೂರ್ತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.