Kodagu

ಪೊಲೀಸ್ ಪೇದೆ ಹುದ್ದೆ ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಜಿಲ್ಲಾಧಿಕಾರಿ ಸೋಮಶೇಖರ್

admincoorgdaily

ಪೊಲೀಸ್ ಪೇದೆ ಹುದ್ದೆ ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಜಿಲ್ಲಾಧಿಕಾರಿ ಸೋಮಶೇಖರ್

ಮಡಿಕೇರಿ ಸೆ.01:-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇದೇ ಸೆಪ್ಟೆಂಬರ್ 6 ರಂದು ನಡೆಯುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು.

 ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತೆಗಳ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮವಹಿಸಬೇಕು, ಭದ್ರತೆ ವ್ಯವಸ್ಥೆ ಬಿಗಿಗೊಳಿಸಬೇಕು, ಹಾಗೆಯೇ ಪರೀಕ್ಷಾ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸುವಂತೆ ತಿಳಿಸಿದರು. ಪರೀಕ್ಷಾ ದಿನದಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು.

 ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೆÇಲೀಸ್ ಬಂದೋಬಸ್ತ್ ಕಲ್ಪಿಸಬೇಕು, ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಮಾತನಾಡಿ, ಮೇಲ್ವಿಚಾರಕರು, ವೀಕ್ಷಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಎಲ್ಲಿಯೂ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು. ಸಿಸಿಟಿವಿಗಳ ಕಣ್ಗಾವಲಿನಲ್ಲಿಯೇ ಪತ್ರಿಕೆ ತರುವಂತಾಗಬೇಕು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ.ಗಣಪತಿ ಅವರು ಮಾಹಿತಿ ನೀಡಿ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸೆ.6 ರಂದು ಭಾನುವಾರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಒಂದುವರೆ ಗಂಟೆಗಳ ಕಾಲ ಲಿಖಿತ ಪರೀಕ್ಷೆ ನಡೆಯಲಿದೆ. ಮಡಿಕೇರಿಯಲ್ಲಿ 6, ಕುಶಾಲನಗರದಲ್ಲಿ 2 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಿದ್ದು, 3,783 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಒಟ್ಟು 3 ಮಾರ್ಗಗಳಿದ್ದು, ಮಡಿಕೇರಿ ನಗರದಲ್ಲಿ 2 ಹಾಗೂ ಕುಶಾಲನಗರದಲ್ಲಿ 1 ಮಾರ್ಗ ಇದೆ ಎಂದರು.

ಮಡಿಕೇರಿ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಕೊಡಗು ವಿದ್ಯಾಲಯ ಮಡಿಕೇರಿ ಹಾಗೂ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ರಜೆಯ ದಿನ ಆಗಿರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ, ಈ ಹಿಂದಿನಂತೆ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಲವು ಸಲಹೆ, ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪರೀಕ್ಷಾ ವೀಕ್ಷಕರಾದ ಶ್ರೀನಿವಾಸ, ಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಜಾಗೃತ ದಳದ ಕೆ.ಕೆ.ಭವಾನಿ, ಸೆಂಟ್ ಜೋಸೆಫ್ ಪಿ.ಯು ಕಾಲೇಜಿನ ಕೆ.ಜಿ.ಸರಸ್ವತಿ, ಪರೀಕ್ಷಾ ಮೇಲ್ವಿಚಾರಕರಾದ ಸತೀಶ್, ಸಂತ ಮೈಕಲರ ಶಾಲೆಯ ಪ್ರಾಂಶುಪಾಲರಾದ ಎಂ.ಎ.ಪಂಕಜ, ಪರೀಕ್ಷಾ ವೀಕ್ಷಕರು, ಮಾರ್ಗಾಧಿಕಾರಿಗಳು, ಪೆÇಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.