ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ : ಯು.ಟಿ. ಖಾದರ್: ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು

Jul 5, 2026 - 22:46
 0  207
ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ : ಯು.ಟಿ. ಖಾದರ್: ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು

ಮಡಿಕೇರಿ, ಜು. 5: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದ್ದಾರೆ. 

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. 

        ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಬೇಕು. ಜೊತೆಗೆ ‘ಎಲ್ ನಿನೊ’ ಪರಿಣಾಮದಿಂದ ಕಡಿಮೆ ಮಳೆಯಾದಲ್ಲಿ ಅನಾವೃಷ್ಠಿಯನ್ನೂ ಸಹ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು. 

ಪ್ರಾಕೃತಿಕ ವಿಕೋಪಗಳು ಯಾರನ್ನು ಕೇಳಿ ಬರುವುದಿಲ್ಲ. ಆದರೆ, ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಸ್ಪಂದಿಸುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕೆಂದು ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದರು. 

ಮುಂದಿನ ಮೂರು ತಿಂಗಳಿನಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸುವುದು ಅತೀಮುಖ್ಯವಾಗಿದೆ ಎಂದು ಸಚಿವರು ಹೇಳಿದರು. 

ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಧಿಕಾರಿಯವರ ಪಿ.ಡಿ. ಖಾತೆಯಲ್ಲಿ 3.05 ಕೋಟಿ ರೂಪಾಯಿ ಲಭ್ಯವಿದೆ. ಜೊತೆಗೆ 5 ತಾಲ್ಲೂಕುಗಳ ತಹಶೀಲ್ದಾರ್‌ಗಳ ಪಿ.ಡಿ. ಖಾತೆಯಲ್ಲಿ ಒಟ್ಟು 141.39 ಲಕ್ಷ ರೂಪಾಯಿ ಲಭ್ಯವಿದೆ. ಹಾಗಾಗಿ ಹಣದ ಕೊರತೆಯಿಲ್ಲ ಎಂದರು. 

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು. ಒಡೆದಿರುವ ಪೈಪ್‌ಲೈನ್‌ಗಳನ್ನು ಸರಿಪಡಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಚಿವರು ಸೂಚಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಸೋಮವಾರಪೇಟೆ ತಾಲೂಕಿನ ಗ್ರಾಮದಲ್ಲಿ ಪೈಪ್‌ಲೈನ್ ಒಡೆದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸುವಂತಾಗಬೇಕು ಎಂದು ಹೇಳಿದರು. 

ಸಚಿವರು ಮಾತನಾಡಿ, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗಮನಹರಿಸಬೇಕು. ಸರಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು. 

ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡುವಂತೆ ಸಲಹೆ ಮಾಡಿದರು. 

ಸೆಸ್ಕ್ ಮತ್ತು ಕುಡಿಯುವ ನೀರು ವಿಭಾಗದ ಎಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಾಕೀತು ಮಾಡಿದರು. 

ಕುಡಿಯುವ ನೀರು ಪೂರೈಕೆ ಕಾಮಗಾರಿ ಸಂಬಂಧ ಜಿ.ಪಂ. ಸಿಇಒ ಅವರು ಗಂಭೀರವಾಗಿ ಪರಿಗಣಿಸಿ ಪ್ರಗತಿ ಪರಿಶೀಲನೆ ನಡೆಸುವಂತೆ ಸಲಹೆ ಮಾಡಿದರು. 

ಎಷ್ಟು ಬೋರ್‌ವೆಲ್ ಕೊರೆಯಲು ಬಾಕಿಯಿದೆ. ಎಷ್ಟು ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದೆ. ಮತ್ತಿತರ ಮಾಹಿತಿಯನ್ನು ಕೂಡಲೇ ಒದಗಿಸುವಂತೆ ಎಂಜಿನಿಯರ್‌ಗೆ ನಿರ್ದೇಶನ ನೀಡಿದರು. 

ವಿಶೇಷ ಕಾರ್ಯಪಡೆಯಲ್ಲಿ ಹಣ ನೀಡುವುದು ಏಕೆ ಎಂದು ಪ್ರಶ್ನಿಸಿದ ಸಚಿವರು, ಅಧಿಕಾರಿಗಳು ಬುದ್ಧಿವಂತಿಕೆ ಜೊತೆಗೆ ಪ್ರಜ್ಞಾವಂತಿಕೆಯಿಂದ ಸಾರ್ವಜನಿಕ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು. 

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಎಚ್ಚರವಹಿಸಬೇಕು. ಮಳೆಗಾಲದಲ್ಲಿ ಹೆದ್ದಾರಿ ಬದಿ ಬೀಳುವ ಮರವನ್ನು ತೆರವುಗೊಳಿಸಬೇಕು. ಬೀಳುವ ಮರದ ಕೊಂಬೆಯನ್ನು ಕಡಿಯುವಂತಾಗಬೇಕು. ವಿದ್ಯುತ್ ಮಾರ್ಗಕ್ಕೆ ಮರದ ಕೊಂಬೆಗಳು ಬೀಳದಂತೆ ಕ್ರಮವಹಿಸಲು ಸೂಚಿಸಿದರು. 

ಗ್ರಾಮೀಣಾಭಿವೃದ್ಧಿ, ಸೆಸ್ಕ್ ಮತ್ತು ಅರಣ್ಯ ಮತ್ತಿತರ ಇಲಾಖೆ ಸಮನ್ವಯತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಕುಡಿಯುವ ನೀರು ಮತ್ತು ಸೆಸ್ಕ್ ವಿಭಾಗದ ಎಂಜಿನಿಯರ್‌ಗಳು ತಂಡವಾಗಿ ಕಾರ್ಯನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು. 

ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಗುಂಡಿಬಿದ್ದ ರಸ್ತೆಗಳಿಗೆ ವೆಟ್‌ಮಿಕ್ಸ್ ಅಳವಡಿಸಬೇಕು. ದುರಂತಗಳಿಗೆ ಅವಕಾಶ ನೀಡಬಾರದು ಎಂದು ಸಚಿವರು ಸೂಚಿಸಿದರು. 

ಶಾಲೆ, ಅಂಗನವಾಡಿಗಳಲ್ಲಿ ಮಳೆಗಾಲದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ಹೇಳಿದರು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರು ಸಲಹೆ ಮಾಡಿದರು. 

ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಯೋಗಾಲಯದ ತಂತ್ರಜ್ಞರು ಇರಬೇಕು. ಡೆಂಗ್ಯೂ, ಮಲೇರಿಯಾ ಸೇರಿದಂತೆ ಇನ್ನಿತರ ರೋಗಗಳ ನಿಯಂತ್ರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಲ್ಲಿ ವೈದ್ಯಾಧಿಕಾರಿಗಳು ಗಮನಹರಿಸಬೇಕೆಂದು ನಿರ್ದೇಶನ ನೀಡಿದರು. 

ತುರ್ತು ಸಂದರ್ಭಗಳಲ್ಲಿ ಸರಕಾರೇತರ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದು, ಮಾನವೀಯತೆಯಿಂದ ಕೆಲಸ ಮಾಡುವ ಸಂಸ್ಥೆಗಳಿಗೆ ಪ್ರಶಂಸನಾ ಪತ್ರವನ್ನು ಜಿಲ್ಲಾಡಳಿತದಿಂದ ನೀಡುವಂತಾಗಬೇಕೆAದು ಹೇಳಿದರು. 

ಪ್ರಾಕೃತಿಕ ವಿಕೋಪ ಸಂದರ್ಭ ಅನಾಹುತ ಸಂಭವಿಸಿದಲ್ಲಿ ಅಧಿಕಾರಿಗಳು ತಕ್ಷಣ ಭೇಟಿ ನೀಡಬೇಕು. ಜೊತೆಗೆ ನಿಯಮಾನುಸಾರ ಪರಿಹಾರ ನೀಡಬೇಕು. ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಕಷ್ಟದಲ್ಲಿರುವವರಿಗೆ ಆತ್ಮಸ್ಥೈರ್ಯ ಮತ್ತು ಮಾನಸಿಕ ಸ್ಥೈರ್ಯ ತುಂಬಬೇಕು. ಮುಂದಿನ ದಿನಗಳಲ್ಲಿ ವಿಭಾಗವಾರು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಹೇಳಿದರು. 

ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸೆಸ್ಕ್ ಸೇರಿದಂತೆ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದರು.

ಜಿಲ್ಲಾಡಳಿತದ ವಾಟ್ಸಾö್ಯಪ್ ಸಂಖ್ಯೆ 8550001077, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 08272 221077, ಪೊಲೀಸ್ ಸಹಾಯವಾಣಿ 112, ಸೆಸ್ಕ್ 191 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಸಚಿವರು ವಿವರಿಸಿದರು. 

ನಗರಸಭಾ ಅಧ್ಯಕ್ಷರಾದ ಪಿ. ಕಲಾವತಿ ಅವರು ಮಾತನಾಡಿ, ಮಡಿಕೇರಿ ನಗರದಲ್ಲಿ ಪದೇ ಪದೇ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಕೋರಿದರು. 

ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಮರ ಹಾಗೂ ಮರದ ಕೊಂಬೆಯನ್ನು ತೆರವು ಮಾಡಲು ಅರಣ್ಯ ಇಲಾಖೆ ಸಹಕರಿಸುವಂತಾಗಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಸರಕಾರದಿಂದ ಬಿಡುಗಡೆ ಮಾಡಿರುವ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಬೇಕು. ಜೊತೆಗೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. 

ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಮಾತನಾಡಿ, ಮಡಿಕೇರಿ ನಗರದಲ್ಲಿ ಯುಜಿ ಕೇಬಲ್ ಅಳವಡಿಸಲು ಅನುಮೋದನೆ ದೊರೆತಿದೆ. ಮಳೆಗಾಲ ನಂತರ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು. 

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಮಾತನಾಡಿ, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಮಾಹಿತಿ ನೀಡಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿ, ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ 4 ತಂಡಗಳಿದ್ದು, ಜೊತೆಗೆ ಎನ್‌ಡಿಆರ್‌ಎಫ್ 1 ತಂಡವಿದೆ. ಹೋಂ ಗಾರ್ಡ್ಸ್ ತಂಡವೂ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಭತ್ತ ಮತ್ತು ಮುಸುಕಿನ ಜೋಳ ಬೆಳೆಯಲಾಗುತ್ತದೆ. ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು. 

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಈ ಬಾರಿ ಮಳೆ ಪ್ರಮಾಣ ಕಡಿಮೆಯಿದ್ದು, ಆದರೂ ಸಹ ಮರದ ಕೊಂಬೆಗಳು ಹಾಗೂ ಮರಗಳು ಬೀಳುತ್ತಿದ್ದು, ಇದನ್ನು ತೆರವು ಮಾಡಲು ಕ್ರಮವಹಿಸುವಂತೆ ಸೂಚಿಸಿದರು. 

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಮಾತನಾಡಿ, ಅಗತ್ಯವಿರುವ ಕಡೆಗಳಲ್ಲಿ ಮರದ ಕೊಂಬೆ ತೆರವು ಮಾಡಲು ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದರು. 

ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಕುಡಿಯುವ ನೀರು ಪೂರೈಕೆ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದರು. 

ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಹನಾ ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು, ಎಂಜಿನಿಯರ್‌ಗಳು, ತಹಶೀಲ್ದಾರ್‌ಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0