ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ: ಕೇರಳ ರಾಜ್ಯದ ಇಬ್ಬರು ಕ್ರೈಸ್ತ ಕನ್ಯಾಸ್ತ್ರೀಯರನ್ನು ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್‌ಗಢ ರಾಜ್ಯದಲ್ಲಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕ್ರೈಸ್ತ ಬಾಂಧವರು ಪ್ರಾರ್ಥನೆ ಸಲ್ಲಿಸಿ, ಘಟನೆಗೆ ಖಂಡನೆ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಮಾತನಾಡಿ, ಘಟನೆಯನ್ನು ಖಂಡಿಸಿ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಜಿಲ್ಲಾ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಕೇರಳ ರಾಜ್ಯದ ಇಬ್ಬರು ಕನ್ಯಾಸ್ತ್ರೀಯರನ್ನು ತಕ್ಷಣ ಬಿಡುಗಡೆ ಮಾಡಬೇಕು. ಸುಳ್ಳು ಮೊಕದ್ದಮೆಯನ್ನು ಹಿಂಪಡೆಯಬೇಕು ಮತ್ತು ಬಂಧಿಸಲು ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಪದಾಧಿಕಾರಿಳು ಮತ್ತು ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.