ಆನೆಚೌಕೂರು ಗೇಟ್‌ನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: ಶಾಸಕ ಪೊನ್ನಣ್ಣರಿಂದ ಪ್ರವಾಸಿ ಮಕ್ಕಳಿಗೆ ಹನಿ
ವಿರಾಜಪೇಟೆ, ಜೂ. 26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ವತಿಯಿಂದ ಆನೆಚೌಕೂರು ಗೇಟ್ ಬಳಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಪ್ರವಾಸಿಗರು ಹಾಗೂ ಪ್ರಯಾಣಿಕರ ಮಕ್ಕಳಿಗೆ ಅನುಕೂಲವಾಗಲೆಂದು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸೂಚನೆ ಮೇರೆಗೆ ಈ ವಿಶೇಷ ಲಸಿಕಾ ಕೇಂದ್ರ ತೆರೆಯಲಾಗಿತ್ತು.
ಮೈಸೂರಿಗೆ ತೆರಳುತ್ತಿದ್ದ ಶಾಸಕರು ಅಭಿಯಾನ ಸ್ಥಳದಲ್ಲಿ ಸ್ವಲ್ಪ ಸಮಯ ಭಾಗವಹಿಸಿ, ಅಲ್ಲಿಗೆ ಆಗಮಿಸಿದ ಪ್ರವಾಸಿಗರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡಿದರು. ಈ ವೇಳೆ ಪೋಲಿಯೋ ಲಸಿಕೆಯ ಮಹತ್ವ ಹಾಗೂ ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಮಾಜಿ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ಯುವ ಕಾಂಗ್ರೆಸ್ ಮುಖಂಡರಾದ ಶಬೀರ್, ಮಂಜುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

