ಸರ್ಕಾರಿ ಶಾಲೆಗೆ 12 ಸಾವಿರ ಹಾಗೂ ಅನುದಾನಿತ ಶಾಲೆಗೆ 6 ಸಾವಿರ ಒಟ್ಟು 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮಡಿಕೇರಿ:- ರಾಜ್ಯದಲ್ಲಿ ಸರ್ಕಾರಿ ಶಾಲೆಗೆ 12 ಸಾವಿರ ಹಾಗೂ ಅನುದಾನಿತ ಶಾಲೆಗೆ 6 ಸಾವಿರ ಒಟ್ಟು 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ (ಎಲ್ ಕೆಜಿ, ಯುಕೆಜಿ) ಆರಂಭಿಸಲಾಗಿದೆ ಎಂದು ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು. ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಸಾರಿಗೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೂ ಗಮನ ಹರಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. ಸಂಜೆ ವೇಳೆಯಲ್ಲಿ ವಿಶೇಷ ತರಗತಿ ನಡೆಸಿ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ. ಒಟ್ಟಾರೆ ಸರ್ಕಾರಿ ಶಾಲೆಗಳ ಸುಧಾರಣೆ ಮತ್ತು ಬೆಳವಣಿಗೆಗೆ ಹೆಚ್ಚಿನ ಕಾಳಜಿ ವಹಿಸಕಾಗಿದೆ ಎಂದು ಶಾಲಾ ಶಿಕ್ಷಣ ಸಚಿವರು ನುಡಿದರು. ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಎಲ್ ಕೆಜಿ ಯಿಂದ 12 ನೇ ತರಗತಿ ವರೆಗೆ ಸುಮಾರು 1.16 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಅವರು ವಿವರಿಸಿದರು.
ರಾಜ್ಯದಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು, 57 ಸಾವಿರ ಅನುದಾನಿತ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು. ರಾಷ್ಟ್ರದ ಬೆಳವಣಿಗೆಗೆ ಶಿಕ್ಷಣದಿಂದ ಮಾತ್ರ ಸಾಧ್ಯ, ಆ ದಿಸೆಯಲ್ಲಿ ಸರ್ಕಾರ ಹಲವು ಸಮಸ್ಯೆಗಳ ನಡುವೆಯೂ ಅಗತ್ಯ ಮೂಲ ಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡಿದೆ ಎಂದು ಶಾಲಾ ಶಿಕ್ಷಣ ಸಚಿವರು ಹೇಳಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಸುಧಾರಿಸುವಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗದಂತೆ 3 ಪರೀಕ್ಷಾ ನೀತಿ ಜಾರಿಗೊಳಿಸಿ, 25 ದಿನಗಳ ಅಂತರದಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಅನುಕೂಲ ಮಾಡಲಾಗಿದೆ. ಆ ನಿಟ್ಟಿನಲ್ಲಿ ಈ ವರ್ಷ 1.16 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿನದ್ದಾಗಿದೆ, ಆ ದಿಸೆಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು. ಸರ್ಕಾರಿ ಶಾಲೆಗಳು ಸುಧಾರಣೆ ಆಗುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು.
ಬೇಳೂರು ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದರು, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವರು ದೇಶ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ನಾಯಕತ್ವ ಗುಣ ಬೆಳೆಸಿಕೊಳ್ಳಲು ಬೇಳೂರು ಶಾಲೆ ಸಹಕಾರ ಆಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪ್ರಸಾದ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಜಿ.ಎಸ್.ಪ್ರಭುದೇವ್, ಗೌರವ ಅಧ್ಯಕ್ಷ ಕೆ.ಡಿ.ಕುಮಾರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಪಿ.ಉಲ್ಲಾಸ್, ಉಪಾಧ್ಯಕ್ಷರಾದ ಆನಂದ, ಬೇಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುದರ್ಶನ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಡಾ.ಚಂದ್ರಮೌಳಿ, ಕೆ.ಪಿ.ಚಂದ್ರಕಲಾ, ಡಿಡಿಪಿಯು ಚಿದಾನಂದ ಮೂರ್ತಿ, ಡಿಡಿಪಿಐ ಬಸವರಾಜು, ಡಾ.ವೇಣುಗೋಪಾಲ್, ತಹಶೀಲ್ದಾರ್ ಕೃಷ್ಣಮೂರ್ತಿ, ಬಿಇಒ ಕೃಷ್ಣಪ್ಪ, ಬಿ.ಬಿ.ಸತೀಶ್, ಭಾಗವಹಿಸಿದ್ದರು.
