ಎಸ್‌ಐಆರ್ ಜಾಗೃತಿ ಅಭಿಯಾನ: ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮೆರವಣಿಗೆ, ಮಾನವ ಸರಪಳಿ
ಸಿದ್ದಾಪುರ:- ಚುನಾವಣಾ ಆಯೋಗವು ಜೂನ್ 29, 2026ರಿಂದ ಆರಂಭಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಪಿ.ಆರ್. ಶಿವದಾಸ್ ಹಾಗೂ ಪ್ರಾಂಶುಪಾಲರಾದ ಕೆ.ಕೆ. ಶೈನ್ ಅವರು ವಿದ್ಯಾರ್ಥಿಗಳಿಗೆ ಎಸ್‌ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯ ಪರಿಷ್ಕರಣೆಯ ಅಗತ್ಯತೆ ಮತ್ತು ನಾಗರಿಕರ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು.
ಬಳಿಕ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಮೆರವಣಿಗೆ ನಡೆಸಿ, ಕರಪತ್ರಗಳನ್ನು ವಿತರಿಸುವುದರ ಜೊತೆಗೆ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಎಸ್‌ಐಆರ್ ಕುರಿತು ಅರಿವು ಮೂಡಿಸಿದರು.
ಮೆರವಣಿಗೆಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಕೇಶ್, ಪೊಲೀಸ್ ಇಲಾಖೆಯ ಶ್ರೀನಿವಾಸ್ ಹಾಗೂ ಸಜಿತ್, ಅರಣ್ಯ ಇಲಾಖೆಯ ಶಶಿ ಪಿ.ಟಿ. ಚಾಲನೆ ನೀಡಿದರು. ಪಾಲಿಬೆಟ್ಟ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ಇತಿಹಾಸ ಉಪನ್ಯಾಸಕ ಪಿ.ಆರ್. ಶಿವದಾಸ್ ಅವರ ನೇತೃತ್ವದಲ್ಲಿ ಮತದಾರರ ಜಾಗೃತಿ ಪ್ರತಿಜ್ಞೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

