ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್

Feb 16, 2026 - 16:54
 0  251
ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್

ಮಡಿಕೇರಿ ಫೆ.16:-ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇದೇ ಫೆಬ್ರವರಿ, 28 ರಿಂದ ಮಾರ್ಚ್, 17 ರವರೆಗೆ ನಡೆಯಲಿದ್ದು., ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ.

 ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

 ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಪರೀಕ್ಷಾ ಕೇಂದ್ರಗಳ ಚಲನವಲನ ಸಂಬಂಧಿಸಿದಂತೆ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೈದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು.

ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು, ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಶುಶ್ರೂಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ,

ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಬಾರಿ 5255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 4,809 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 250 ಖಾಸಗಿಯಾಗಿ ಹಾಗೂ 196 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿಜಯ್ ಅವರು ಮಾಹಿತಿ ನೀಡಿದರು.

ಕಲಾ ವಿಭಾಗದಲ್ಲಿ 1,054 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2603 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 1598 ವಿದ್ಯಾರ್ಥಿಗಳು ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ತಿಳಿಸಿದ್ದಾರೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.

ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲ್ಲೂಕಿನ 5, ಸೋಮವಾರಪೇಟೆ ತಾಲ್ಲೂಕಿನ 8 ಮತ್ತು ವಿರಾಜಪೇಟೆ ತಾಲ್ಲೂಕಿನ 5 ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ವಿವರ: ಮಡಿಕೇರಿ ತಾಲ್ಲೂಕಿನ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು. ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ ಹಾಗೂ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಕೊಡ್ಲಿಪೇಟೆ ಮತ್ತು ಶನಿವಾರಂತೆ ಪದವಿ ಪೂರ್ವ ಕಾಲೇಜು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.

 ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರಂಗಿ ನಾಗರಾಜು ಅವರು ಮಾತನಾಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‍ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0