ಕಾಂಗ್ರೆಸ್ ಹಿರಿಯ ಶಾಸಕ‌ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್ ಹಿರಿಯ ಶಾಸಕ‌ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಭಾನುವಾರ ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ವಿವಿಧ ಅವಧಿಗಳಲ್ಲಿ ರಾಜ್ಯದ ಹಲವು ಮುಖ್ಯಮಂತ್ರಿಗಳ ಸಂಪುಟಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆಡಳಿತ ಅನುಭವ, ಸಂಘಟನಾ ಸಾಮರ್ಥ್ಯ ಮತ್ತು ಸಮಾಜಮುಖಿ ಚಟುವಟಿಕೆಗಳ ಮೂಲಕ ಅವರು ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದರು.

ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜದ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. 

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜಕೀಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.