ಸಿದ್ದಾಪುರ; ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಸಿದ್ದಾಪುರ; ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಸಿದ್ದಾಪುರ :-ಯುಗಾದಿ ಹಾಗೂ ರಂಜಾನ್ ಹಬ್ಬಗಳ ಅಂಗವಾಗಿ ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಸಿದ್ದಾಪುರ ಪೊಲೀಸ್ ಠಾಣಾ ಕಛೇರಿಯಲ್ಲಿ ಶಾಂತಿ ಸಭೆ ಬುಧವಾರ ಆಯೋಜಿಸಲಾಯಿತು.

ಮಡಿಕೇರಿ ಪೊಲೀಸ್ ವೃತ್ತ ನಿರೀಕ್ಷಕ ರಾಜು ಹಾಗೂ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಈ. ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಸಮುದಾಯಗಳ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು.

ಸಭೆಯಲ್ಲಿ ಮಾತನಾಡಿದ ಅಧಿಕಾರಿಗಳು, ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು. ಇದೇ ವೇಳೆ ಹಬ್ಬಗಳ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಸಭೆಯಲ್ಲಿ ಭಾಗವಹಿಸಿದ ಸಮುದಾಯದ ಮುಖಂಡರು ಶಾಂತಿ ಕಾಪಾಡಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಭೆ ಶಾಂತಿಯುತವಾಗಿ ನೆರವೇರಿತು.